ಗ್ಯಾರಂಟಿ ಕಾರ್ಡ್ ವಿತರಣೆ

ಕೆ.ಆರ್.ನಗರ, ಮಾ.16:- ಕಾಂಗ್ರೆಸ್ ಪಕ್ಷದ ವತಿಯಿಂದ ಘೋಷಣೆ ಮಾಡಲಾಗಿರುವ ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಯನ್ನು 2023ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತರಲಾಗುತ್ತದೆ ಎಂದು ಜಿಲ್ಲಾ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಹೇಳಿದರು.
ಪಟ್ಟಣದ ಅರ್ಕೇಶ್ವರ ಆಟೋ ನಿಲ್ದಾಣದ ಬಳಿ ಯೋಜನೆಗಳ ಗ್ಯಾರಂಟಿ ಕಾರ್ಡ್ ವಿತರಣೆಗೆ ಚಾಲನೆ ನೀಡಿದ ಮಾತನಾಡಿದ ಅವರು ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಭಿಗಳನ್ನಾಗಿ ಮಾಡಬೇಕು ಎಂಬ ಉದ್ದೇಶದಿಂದ ಪ್ರತಿ ತಿಂಗಳು 2 ಸಾವಿರ ರೂಗಳನ್ನು ಕುಟುಂಬದ ಮುಖ್ಯಸ್ಥೆಯ ಖಾತೆಗೆ ಜಮಾ ಮಾಡಲಾಗುತ್ತದೆ ಎಂದರು.
?ಬಡವರು ಮತ್ತು ಹಿಂದುಳಿದ ವರ್ಗದವರಿಗೆ ಮೂಲಸೌಕರ್ಯ ಒದಗಿಸುವ ಸಲುವಾಗಿ ಗೃಹಜ್ಯೋತಿ ಯೋಜನೆಯನ್ನು ಚುನಾವಣೆಗೂ ಮುನ್ನಾ ಘೋಷಿಸಲಾಗಿದ್ದು 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತದೆ ಇದರ ಜತೆಗೆ ಸಿದ್ದರಾಮಯ್ಯನವರ ಅನ್ನಭಾಗ್ಯ ಯೋಜನೆಯನ್ನು ಮುಂದುವರೆಸಲಿದ್ದು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಮತ್ತು ಜೆಡಿಎಸ್ ನವರ ಅಪಪ್ರಚಾರಕ್ಕೆ ಜನತೆ ಕಿವಿಗೊಡಬಾರದು ಎಂದು ಮನವಿ ಮಾಡಿದ ಕಾರ್ಯದರ್ಶಿಗಳು ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಈಗಾಗಲೇ ಘೋಷಣೆ ಮಾಡಲಾಗಿರುವ ಯೋಜನೆಗಳನ್ನು ಅಥಾವತ್ತಾಗಿ ಜಾರಿ ಮಾಡುವುದರ ಜತೆಗೆ ಜನತೆಗೆ ಉಪಯುಕ್ತವಾದ ಇನ್ನು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುತ್ತದೆ ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಪಕ್ಷ ಈ ಹಿಂದೆ ಘೋಷಣೆ ಮಾಡಿದಂತಹಾ ಎಲ್ಲಾ ಭರವಸೆಗಳನ್ನು ಅಧಿಕಾರದಲ್ಲಿದ್ದಾಗ ಈಡೇರಿಸಿದ್ದೇವೆ ಆದ್ದರಿಂದ ಜನತೆ ಅಪಪ್ರಚಾರಕ್ಕೆ ಒಳಗಾಗಬಾರದು ಎಂಬ ಕಾರಣಕ್ಕಾಗಿ 2023ರ ಚುನಾವಣೆಗೂ ಮುನ್ನಾ ಘೋಷಣೆ ಮಾಡಿರುವ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂಬ ಭರವಸೆಯೊಂದಿಗೆ ಪಕ್ಷದ ವತಿಯಿಂದ ಗ್ಯಾರಂಟಿ ಕಾರ್ಡ್ ವಿತರಿಸಲಾಗುತ್ತಿದೆ ಇದನ್ನು ಅರ್ಥ ಮಾಡಿಕೊಂಡು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಕೆ.ಆರ್.ನಗರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ರವಿಶಂಕರ್ ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ ಎಂದು ಮಾಹಿತಿ ನೀಡಿದ ಶಿವಪ್ರಸಾದ್ ಎರಡು ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ಜನಾಶೀರ್ವಾದ ಯಾತ್ರೆ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿ ಮುಂದುವರೆಯುತ್ತಿದ್ದು ಈ ಬಾರಿ ಡಿ.ರವಿಶಂಕರ್ ಅತ್ಯಧಿಕ ಬಹುಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ಇದರಿಂದ ಕ್ಷೇತ್ರದ ಅಭಿವೃದ್ದಿಯ ಪರ್ವ ಆರಂಭವಾಗಲಿದೆ ಎಂದು ಭರವಸೆ ನೀಡಿದರು.
ಆಟೋ ಮತ್ತು ಖಾಸಗಿ ವಾಹನಗಳಿಗೆ ಗ್ಯಾರಂಟಿನ ಭಿತ್ತಿಪತ್ರಗಳನ್ನು ಅಂಟಿಸಿ ಪ್ರಚಾರಕ್ಕೆ ಚಾಲನೆ ನೀಡಿದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿ ಪಕ್ಷದ ದುರಾಡಳಿತದಿಂದ ಬೇಸತ್ತಿರುವ ಜನತೆ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಲಿದ್ದಾರೆ ಕ್ಷೇತ್ರದ ಅಭಿವೃದ್ದಿಗಾಗಿ ಡಿ.ರವಿಶಂಕರ್‍ರವರ ಗೆಲುವಿಗೆ ಎಲ್ಲರೂ ಒಟ್ಟಾಗಿ ದುಡಿಯಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸೈಯದ್‍ಸಿದ್ದಿಕ್, ಸದಸ್ಯರಾದ ಕೋಳಿಪ್ರಕಾಶ್, ಶಿವುನಾಯಕ್, ಶಂಕರ್‍ಸ್ವಾಮಿ, ಜಾವೀದ್ ಪಾಷ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ನಗರಾಧ್ಯಕ್ಷ ಎಂ.ಜೆ.ರಮೇಶ್, ವಕ್ತಾರ ಸೈಯದ್‍ಜಾಬೀರ್, ಮಾಜಿ ಅಧ್ಯಕ್ಷ ನರಸಿಂಹರಾಜು, ಅಶ್ವಿನಿಪುಟ್ಟರಾಜು ಮುಖಂಡರಾದ ಗಾರೆರವಿ, ಕೆ.ವಿನಯ್, ಪುಟ್ಟರಾಜು, ಮೋಹನ್‍ಕುಮಾರ್, ಬುಡಿಗೌಡ, ನಾರಾಗಿರೀಶ್, ಮಹದೇವ್, ಎಂ.ಎಸ್.ಅನಂತು, ಶಾಂತರಾಜು ಇದ್ದರು.