ಬೆಳಗಾವಿ, ಮೇ.೨೯- ವಿಧಾನಸಬಾ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ನೀಡಿರುವ ೫ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ. ಈ ವಿಚಾರದಲ್ಲಿ ಪ್ರತಿಪಕ್ಷಗಳು ತಾಳ್ಮೆಯಿಂದ ಇರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಆಶ್ವಾಸನೆಗಳನ್ನು ಈಡೇರಿಸುವ ಸಂಬಂಧ ಸಿದ್ಧತೆಗಳು ಆರಂಭವಾಗಿವೆ. ಹಂತ ಹಂತವಾಗಿ ಈಡೇರಿಸುತ್ತೇವೆ. ಇದಕ್ಕೆ ಸ್ವಲ್ಪ ಸಮಯ ಬೇಕಾಗಿದೆ. ಹಾಗೆಂದ ಮಾತ್ರಕ್ಕೆ ಜನರನ್ನು ಬಹಳಷ್ಟು ದಿನ ಕಾಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ದೇಶದ ಪ್ರತಿಯೊಬ್ಬ ಜನತೆಯ ಖಾತೆಗೆ ೧೫ ಲಕ್ಷ ಜಮೆ ಮಾಡುವುದಾಗಿ ಬಿಜೆಪಿ ಭರವಸೆ ನೀಡಿ ೧೪ ವರ್ಷ ಕಳೆದಿದೆ. ಜನರಿಗೆ ನಂಬಿಕೆ ದ್ರೋಹ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಹಾಗೇ ಮಾಡುವುದಿಲ್ಲ. ಆಶ್ವಾಸನೆಯನ್ನು ಜಾರಿಗೊಳಿಸುತ್ತೇವೆ ಎಂದು ಭರವಸೆ ನೀಡಿದರು. ತಮಗೆ ದೊರೆತಿರುವ ಖಾತೆ ಖುಷಿ ತಂದಿದ್ದು, ಉತ್ತಮ ಕೆಲಸ ಮಾಡಲು ಇಲಾಖೆಯಲ್ಲಿ ಸಾಕಷ್ಟು ಅವಕಾಶವಿದ್ದು, ಅದನ್ನು ಬಳಸಿಕೊಂಡು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದರು.