ಗ್ಯಾರಂಟಿ ಫಲಾನುಭವಿಗಳ ಸಮೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

ಸಂಜೆವಾಣಿ ನ್ಯೂಸ್
ಮೈಸೂರು.ಫೆ.25:- ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಸರ್ಕಾರದಿಂದ ಜಾರಿಗೆ ತರಲಾದ ಐದು ‘ಗ್ಯಾರಂಟಿ ಯೋಜನೆ’ಗಳು ಸರಿಯಾಗಿ ಜನತೆಗೆ ತಲುಪಿದೆಯೇ, ಗ್ಯಾರಂಟಿ ಯೋಜನೆಗಳ ಸದುಪಯೋಗ ಆಗಿದೆಯೇ ಎಂಬುದನ್ನು ತಿಳಿಯಲು ಸರ್ಕಾರದಿಂದ ಸಮೀಕ್ಷೆ ಮಾಡಲು ತೀರ್ಮಾನಿಸಲಾಗಿದ್ದು ಗ್ಯಾರಂಟಿ ಯೋಜನೆಗಳ ಸಮೀಕ್ಷೆಗಾಗಿ ಸ್ವಯಂ ಸೇವಕರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ತಿಳಿಸಿದರು.
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಗ್ಯಾರೆಂಟಿ ಯೋಜನೆಗಳ ಸದುಪಯೋಗ ತಿಳಿಯಲು ಮನೆ ಮನೆ ಸಮೀಕ್ಷೆ ಮಾಡುವ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರವು ಬಡವರ ಹಾಗೂ ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ 5 ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗೃಹಜ್ಯೋತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳನ್ನು ರೂಪಿಸಿದೆ. ರಾಜ್ಯದ ಪ್ರತಿ ಮನೆ ಮನೆಗೂ ಈ 5 ಗ್ಯಾರಂಟಿ ಯೋಜನೆಗಳು ಸರಿಯಾದ ರೀತಿಯಲ್ಲಿ ತಲುಪಿವೆಯೇ ಎಂಬ ಬಗ್ಗೆ ಜಿಲ್ಲಾ ವ್ಯಾಪ್ತಿ ಸಮೀಕ್ಷೆ ಮಾಡಲು ‘ಗ್ಯಾರಂಟಿ ಸ್ವಯಂ-ಸೇವಕ’ರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳನ್ನು ‘ಗ್ಯಾರಂಟಿ ಸ್ವಯಂ-ಸೇವಕ’ರಾಗಿ ನೇಮಿಸಿ ಅವರು ಪ್ರತಿ ಮನೆ ಮನೆಗೂ ಭೇಟಿ ನೀಡಿ ಗ್ಯಾರಂಟಿ ಯೋಜನೆಗಳು ತಲುಪಿರುವ ಬಗ್ಗೆ, ಹಾಗೂ ಸದರಿ ಯೋಜನೆಗಳ ಬಗ್ಗೆ ಜನರ ಅಭಿಪ್ರಾಯ ಮತ್ತು ಅದರ ಸದ್ಬಳಕೆ ಆಗುತ್ತಿರುವ ಕುರಿತು ಒಂದು ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಸದರಿ ಕೆಲಸಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳಿಗೆ ಪೆÇ್ರೀತ್ಸಾಹ ಧನವನ್ನು ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
2023-24ನೇ ಸಾಲಿನ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗೃಹಜ್ಯೋತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳು ಸರಿಯಾದ ರೀತಿಯಲ್ಲಿ ಫಲಾನುಭವಿಗಳಿಗೆ ತಲುಪಿರುವ ಕುರಿತಂತೆ ಮನೆ ಮನೆಗಳಿಗೆ ತೆರಳಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇಲಾಖೆಗಳ ಸಿಬ್ಬಂದಿಗಳನ್ನೊಳಗೊಂಡಂತೆ ಸಮೀಕ್ಷೆ ಸಮರ್ಪಕವಾಗಿ ಮಾಡಬೇಕು ಹಾಗೂ ಸಮೀಕ್ಷೆಗೆ ಪ್ರತಿ ‘ಗ್ಯಾರಂಟಿ ಸ್ವಯಂ ಸೇವಕ’ರಿಗೆ 100 ರಿಂದ 120 ಮನೆಗಳನ್ನು ಹಂಚಿಕೆ ಮಾಡಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಮಹಾನಗರ ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.