ಬೆಂಗಳೂರು, ಮೇ.28-ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿಗೆ ಬದ್ಧವಾಗಿದ್ದು, ನುಡಿದಂತೆ ನಡೆಯಲಿದೆ. ನಾವು ನೀಡಿರುವ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
ವಿದ್ಯುತ್ ಬಿಲ್ ಹಾಗೂ ಸರ್ಕಾರಿ ಬಸ್ ಗಳಲ್ಲಿ ಹಣ ಕೊಟ್ಟು ಟಿಕೆಟ್ ಪಡೆಯಬೇಡಿ ಎಂದು ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರ ವಿರುದ್ದ ಅವರು ವಾಗ್ದಾಳಿ ನಡೆಸಿದರು.
ಸದಾಶಿವ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಮಾಡಲು ಬೇರೆ ಕೆಲಸ ಇಲ್ಲ. ಹೀಗಾಗಿ ಅವರು ಜನರನ್ನು ಎತ್ತಿ ಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಮೊದಲು ಎಲ್ಲರ ಖಾತೆಗೆ 15 ಲಕ್ಷ ರೂ. ಹಾಕಲಿ. 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಸೇರಿ ಬಿಜೆಪಿಯು ಅನೇಕ ಭರವಸೆಗಳನ್ನು ಪ್ರಣಾಳಿಕೆ ನೀಡಿತ್ತು. ಆದರೆ ಮಾಡಲಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುವುದಾಗಿ ಜನರಿಗೆ ಮಾತು ನೀಡಿದ್ದೇವೆ.ಅರ್ಹರನ್ನು ಪಾರದರ್ಶಕವಾಗಿ ನೇಮಕ ಮಾಡಿ, ನಿರುದ್ಯೋಗ ಸಮಸ್ಯೆ ಬಗೆಹರಿಸುತ್ತೇವೆ ಎಂದರು.
ಸರ್ಕಾರದ ಇಲಾಖೆಗಳಲ್ಲಿ ಇರುವ ಖಾಲಿ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲಾಗುವುದು. ಪಾರದರ್ಶಕ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುವುದು. ಹೀಗಾಗಿ ಇದು ಒಂದೆರಡು ದಿನಗಳಲ್ಲಿ ಆಗುವುದಿಲ್ಲ, ಇದಕ್ಕೆ ಸಮಯ ಬೇಕಾಗಲಿದೆ ಎಂದು ಅವರು ಹೇಳಿದರು.
ನೆಟ್ಟಾರು ಅವರ ಪತ್ನಿ ಉದ್ಯೋಗ ವಿಚಾರ ಕುರಿತು ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಪ್ರತಿಕ್ರಯಿಸಿದ ಅವರು, ಬಿಜೆಪಿಯವರು ಏನಾದರೂ ಮಾತನಾಡಲಿ, ನಾನು ಅದಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿಗಳು ಈ ವಿಚಾರವಾಗಿ ತೀರ್ಮಾನ ಮಾಡಿದ್ದಾರೆ. ಬಿಜೆಪಿಯವರು ಆತುರದಿಂದ ರಾಜಕೀಯ ಮಾಡಲು ಬಯಸಿದರೆ ನಾವು ಸಮಾಜದ ಶಾಂತಿ, ಸೌಹಾರ್ದತೆ ಹಾಗೂ ಅಭಿವೃದ್ಧಿ ಬಗ್ಗೆ ಆಲೋಚನೆ ಮಾಡುತ್ತಿದ್ದೇವೆ ಎಂದು ಹೇಳಿದರು.