ಗ್ಯಾರಂಟಿ ಯೋಜನೆ ಅನುಷ್ಠಾನ ಬಿಜೆಪಿಗೆ ಹೊಟ್ಟೆ ಉರಿ

ಸಿಎಂ ಕಿಡಿ

ಬೆಂಗಳೂರು, ಜ. ೧೨- ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಬಿಜೆಪಿಯವರಿಗೆ ಹೊಟ್ಟೆ ಉರಿ ಶುರುವಾಗಿದೆ. ಹಾಗಾಗಿಯೇ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿಂದು ಯುವನಿಧಿ ಯೋಜನೆಗೆ ಚಾಲನೆ ನೀಡುವ ಮುನ್ನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬಡವರು ಹಾಗೂ ಮಧ್ಯಮ ವರ್ಗದವರಿಗೆ ಸಾಕಷ್ಟು ಅನುಕೂಲವಾಗಿದೆ. ಇವರನ್ನು ಆರ್ಥಿಕವಾಗಿ ಸಬಲೀಕರಣ ಮಾಡಬೇಕು ಎಂಬುದು ಈ ಯೋಜನೆಗಳ ಉದ್ದೇಶ. ಈ ಯೋಜನೆಗಳು ಎಷ್ಟರ ಮಟ್ಟಿಗೆ ಯಶಸ್ವಿಯಾಗಿವೆ ಎಂಬುದನ್ನು ನೀವೇ ಪರೀಕ್ಷಿಸಿ ಎಂದು ಮಾಧ್ಯಮದವರಿಗೆ ಸಲಹೆ ಮಾಡಿದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ನನ್ನ ಮಾತನನ್ನು ಕೇಳಬೇಡಿ, ವಿರೋಧ ಪಕ್ಷಗಳ ಮಾತನ್ನು ಕೇಳಬೇಡಿ ನೀವೇ ಖುದ್ಧು ಈ ಯೋಜನೆಗಳ ಪರಿಶೀಲನೆ ಮಾಡಿದರೆ ಅದರಿಂದ ಎಷ್ಟು ಬಡವರಿಗೆ ಅನುಕೂಲವಾಗಿದೆ ಎಂಬುದು ಗೊತ್ತಾಗುತ್ತದೆ ಎಂದರು.
ಗೃಹಲಕ್ಷ್ಮಿಯೋಜನೆಯ ೧.೧೮ ಕುಟುಂಬದ ಯಜಮಾನಿಯರಿಗೆ ೨ ಸಾವಿರ ರೂ.ಗಳನ್ನು ಮಾಸಿಕ ನೀಡುತ್ತಿದ್ದೇವೆ. ಶಕ್ತಿ ಯೋಜನೆಯಡಿ ಇದುವರೆಗೂ ೧೩೦ ಕೋಟಿ ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಸಂಚರಿಸಿದ್ದಾರೆ ಇವೆಲ್ಲಾ ಸುಳ್ಳೆ ಎಂದು ಸಿದ್ಧರಾಮಯ್ಯ ಪ್ರಶ್ನಿಸಿದರು.
ಅನ್ನಭಾಗ್ಯ ಯೋಜನೆಯಡಿ ೧೭೦ ರೂ.ಗಳನ್ನು ಬಿಪಿಎಲ್ ಕಾರ್ಡ್‌ದಾರರಿಗೆ ನೀಡಲಾಗುತ್ತಿದೆ. ೧.೫೦ ಕೋಟಿ ಮನೆಯವರಿಗೆ ೨೦೦ ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ ಇದೆಲ್ಲಾ ಸುಳ್ಳೆ ಎಂದು ಸಿದ್ಧರಾಮಯ್ಯ ಪ್ರಶ್ನಿಸಿ, ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ, ಮಧ್ಯಮ ವರ್ಗದವರಿಗೆ ಅನುಕೂಲವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ನೆರವು ನೀಡಲು ಈ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ್ದೇವೆ ಎಂದು ಹೇಳಿದರು
ಇಂದಿನಿಂದ ಯುವನಿಧಿ ಯೋಜನೆ ಜಾರಿಯಾಗುತ್ತಿದೆ. ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ಜತೆಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುತ್ತೇವೆ ಎಂದು ಸಿದ್ಧರಾಮಯ್ಯ ಹೇಳಿದರು
ಗ್ಯಾರಂಟಿ ಯೋಜನೆಗಳ ಮೂಲಕ ಸರ್ಕಾರ ಹಣ ಪೋಲು ಮಾಡುತ್ತಿದೆ. ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಎಂದರೆ ಸುಳ್ಳು, ಸುಳ್ಳು ಎಂದರೆ ಕುಮಾರಸ್ವಾಮಿ, ಹಾಗಾಗಿ ಸುಳ್ಳು ಹೇಳುವ ಕುಮಾರಸ್ವಾಮಿ ಅವರ ಮಾತಿಗೆ ನಾನು ಪ್ರತಿಕ್ರಿಯಿಸಲ್ಲ ಎಂದರು.
ಗ್ಯಾರಂಟಿ ಯೋಜನೆಗಳನ್ನು ಚುನಾವಣಾ ಉದ್ದೇಶ ಇಟ್ಟುಕೊಂಡು ಮಾಡಿಲ್ಲ. ಬಡವರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರನ್ನಾಗಿಸಿ ಅವರನ್ನು ಮುಖ್ಯವಾಹಿನಿಗೆ ತರುವುದು ಈ ಯೋಜನೆಯ ಉದ್ದೇಶ. ಪ್ರತಿ ಬಡ ಕುಟುಂಬಕ್ಕೆ ಪ್ರತಿ ತಿಂಗಳು ೪ ರಿಂದ ೫ ಸಾವಿರ ರೂ. ನೆರವು ಸರ್ಕಾರದಿಂದ ಸಿಗುತ್ತಿದೆ. ವಾರ್ಷಿಕ ೫೦-೬೦ ಸಾವಿರ ಆರ್ಥಿಕ ನೆರವು ಈ ಕುಟುಂಬಗಳಿಗೆ ಹೋಗುತ್ತಿದೆ. ಇದರಿಂದ ಆ ಕುಟುಂಬಗಳನ್ನು ಸಬಲೀಕರಣ ಮಾಡಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ರಾಮಮಂದಿರ ಉದ್ಘಾಟನೆ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ನಮ್ಮದೇನಿದ್ದರೂ ರಾಜಕೀಯಕಕ್ಕೆ ಅಷ್ಟೇ ವಿರುದ್ಧ. ಜನವರಿ ೨೨ ರಂದು ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರುಗಳೆಲ್ಲಾ ರಾಮಮಂದಿರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಾರೆ ಎಂದು ಹೇಳಿದರು
ಮೂವರು ಉಪಮುಖ್ಯಮಂತ್ರಿಗಳನ್ನು ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ಧಱಾಮಯ್ಯ ಅವರು, ಆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.