ಗ್ರಂಥಾಲಯವೇ ಅಂಬೇಡ್ಕರ್ ಪಾಲಿನ ದೇವಾಲಯ

ಕಲಬುರಗಿ:ಎ.14: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗ್ರಂಥಾಲಯವೇ ದೇವಾಲಯ ಆಗಿತ್ತು ಎಂದು ಎನ್‍ಎಸ್‍ಎಸ್ ಕಲಬುರಗಿ ವಿಭಾಗೀಯ ಅಧಿಕಾರಿ ಡಾ.ಚಂದ್ರಶೇಖರ ದೊಡ್ಡಮನಿ ಹೇಳಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಸರಕಾರಿ ಸ್ನಾತಕೋತ್ತರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜಯಂತ್ಯುತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಸತತ ಪರಿಶ್ರಮದಿಂದ ಅಧ್ಯಯನ ಮಾಡಿ ಸಮಾಜಕ್ಕೆ ಮಾರ್ಗದರ್ಶಕರಾಗಬೇಕು. ಅಂಥದ್ದೊಂದು ಅತ್ಯುತ್ತಮ ಬದುಕು ರೂಪಿಸಿಕೊಳ್ಳಬೇಕಾದರೆ ವಿದ್ಯಾರ್ಥಿಗಳು ಅಧ್ಯಯನಕ್ಕೆ ಹೆಚ್ಚು ಒತ್ತು ನೀಡಬೇಕೆಂದು ಅವರು ಕಿವಿಮಾತು ಹೇಳಿದರು.

ಡಾ.ಅಂಬೇಡ್ಕರ್ ಅವರು ತಮ್ಮ ಬದುಕಿನ ಅಮೂಲ್ಯ ಸಮಯವನ್ನು ಗ್ರಂಥಾಲಯದಲ್ಲಿ ಕಳೆಯುವ ಮೂಲಕ ತಮ್ಮ ಜ್ಞಾನದ ಹಸಿವು ನೀಗಿಸಿಕೊಳ್ಳುತ್ತಿದ್ದರು. ಅವರಲ್ಲಿದ್ದ ಅಂತಹ ಅಧ್ಯಯನಶೀಲ ಗುಣದಿಂದಾಗಿಯೇ ಭಾರತಕ್ಕೆ ಇಡೀ ಜಗತ್ತು ಒಪ್ಪುವಂತಹ ಸಂವಿಧಾನ ನೀಡಲು ಸಾಧ್ಯವಾಯಿತು ಎಂದರು.

ವಸತಿ ನಿಲಯದ ಪರಿಪಾಲಕ ಮೋಹನ್ ಜಾಧವ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಅನಿಲ್ ನಿರೂಪಿಸಿದರು. ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.