ಗ್ರಾಮಾಂತರ: 7 ಗ್ರಾಮ ಪಂಚಾಯ್ತಿ ಬಿಜೆಪಿ ಆಡಳಿತ

ತುಮಕೂರು, ಜು. ೨೦- ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ೭ ಗ್ರಾ.ಪಂ.ಗಳಿಗೆ ನಡೆದ ೨ನೇ ಹಂತದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ೫ ಗ್ರಾಮ ಪಂಚಾಯ್ತಿಗಳಲ್ಲಿ ಅವಿರೋಧ ಆಯ್ಕೆ ನಡೆದಿದ್ದು, ೨ ಪಂಚಾಯಿತಿಗಳಲ್ಲಿ ಚುನಾವಣೆ ನಡೆದಿದ್ದು, ೭ ಗ್ರಾಮ ಪಂಚಾಯಿತಿಗಳಲ್ಲಿಯೂ ಬಿಜೆಪಿ ಬೆಂಬಲಿತ ಸದಸ್ಯರು ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಿಡವಳಲು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೂ, ಉಪಾಧ್ಯಕ್ಷ ಸ್ಥಾನ ಬಿಸಿಎಂ ಎ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಹನುಮಂತರಾಯಪ್ಪ, ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರಕಲಾ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಎರಡು ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಗಳು ಘೋಷಿಸಿದ್ದಾರೆ.
ನಾಗವಲ್ಲಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಸ್ಥಾನ ಸಾಮಾನ್ಯಗೆ ಮೀಸಲಾಗಿದ್ದರೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಮಂಗಳ ಗೌರಮ್ಮ, ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಎನ್. ನಾಮಪತ್ರ ಸಲ್ಲಿಸಿದ್ದರು. ಎರಡು ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಬಂದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಮಂಗಳಗೌರಮ್ಮ, ಉಪಾಧ್ಯಕ್ಷರಾಗಿ ಜ್ಯೋತಿ ಎನ್. ಅವರುಗಳು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಗಳು ಘೋಷಿಸಿದ್ದಾರೆ.
ಹೊನ್ನುಡಿಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ವಿಜಯಲಕ್ಷ್ಮಿ ಕಿಟ್ಟಪ್ಪ, ಉಪಾಧ್ಯಕ್ಷ ಸ್ಥಾನಕ್ಕೆ ರಾಮಕೃಷ್ಣಯ್ಯ (ಅಪ್ಪಿ) ಅವರುಗಳು ಸ್ಪರ್ಧಿಸಿದ್ದರು. ಎರಡು ಹುದ್ದೆಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಕಾರಣ, ಅಧ್ಯಕ್ಷರಾಗಿ ವಿಜಯಲಕ್ಷ್ಮಿ ಕಿಟ್ಟಪ್ಪ, ಉಪಾಧ್ಯಕ್ಷರಾಗಿ ರಾಮಕೃಷ್ಣ (ಅಪ್ಪಿ) ಅವರುಗಳು ಅಧ್ಯಕ್ಷ-ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾ ಅಧಿಕಾರಿ ಘೋಷಣೆ ಮಾಡಿದರು.
ಹೆಬ್ಬೂರು ಗ್ರಾ.ಪಂ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಕ್ಯಾಟಗೆರಿ(ಎ)ಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷ ಸ್ಥಾನಕ್ಕೆ ಬಾಬು ಹೆಚ್.ಎನ್. ಸ್ಪರ್ಧಿಸಿದ್ದು, ಎರಡು ನಾಮಪತ್ರಗಳ ಹೊರತು ಬೇರೆಯವರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಲಕ್ಷ್ಮಿದೇವಮ್ಮ, ಉಪಾಧ್ಯಕ್ಷರಾಗಿ ಬಾಬು ಹೆಚ್.ಎನ್. ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಳ್ಳಾವಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಆರ್.ಎಸ್., ಉಪಾಧ್ಯಕ್ಷರಾಗಿ ಲೋಕಮ್ಮ ಅವರುಗಳು ಸ್ಪರ್ಧಿ ಮಾಡಿದ್ದು, ಇವರ ವಿರುದ್ದ ಉಮೇದುವಾರಿಕೆ ಬಾರದ ಹಿನ್ನೆಲೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಿಸಲಾಗಿದೆ.
ಮೈದಾಳ ಗ್ರಾಮ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಮಾದಗೊಂಡನಹಳ್ಳಿಯ ಬಿ.ಜಿ. ಉಮೇಶ್, ಉಪಾಧ್ಯಕ್ಷರಾಗಿ ಮಂಗಳಮ್ಮ ಅವರು ಚುನಾಯಿತರಾಗಿದ್ದಾರೆ. ೩೧ ಸದಸ್ಯರನ್ನು ಒಳಗೊಂಡಿರುವ ಮೈದಾಳ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿಜೆಪಿ ಬೆಂಬಲಿತ ಸದಸ್ಯ ಉಮೇಶ್ ಬಿ.ಜಿ. ೨೩ ಮತಗಳನ್ನು ಪಡೆದರೆ, ಇವರ ಎದುರಾಳಿ ಮೈದಾಳದ ನರಸಿಂಹಮೂರ್ತಿ ೮ ಮತಗಳನ್ನು ಪಡೆದರು.
ಮಲ್ಲಸಂದ್ರ ಗ್ರಾಮ ಪಂಚಾಯಿತಿಯ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಹಬ್ಬತ್ತನಹಳ್ಳಿ ಮಂಜುಮ್ಮ ಅಧ್ಯಕ್ಷರಾಗಿ, ಕೊತ್ತಿಹಳ್ಳಿ ಗಿರೀಶ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.