ಗ್ರಾಮೀಣರ ಸಮಸ್ಯೆಗಳ ಪರಿಹಾರಕ್ಕಾಗಿ ಗ್ರಾಮ ವಾಸ್ತವ್ಯ: ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್

ವಿಜಯಪುರ, ಮಾ.21-ಸರ್ಕಾರದ ನಿರ್ದೇಶನದಂತೆ ಗ್ರಾಮಗಳ ಸಮಸ್ಯೆಗಳ ಪರಿಹಾರಕ್ಕಾಗಿ ಗ್ರಾಮ ವಾಸ್ತವ್ಯ ಮಾಡಲಾಗುತ್ತಿದ್ದು, ಪಕ್ಕದ ಗ್ರಾಮಗಳ ಸಮಸ್ಯೆಗಳನ್ನು ಪರಿಹರಿಸಲು ವಿಶೇಷ ಗಮನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ಅವರು ಹೇಳಿದರು.
ಮುದ್ದೇಬಿಹಾಳ ತಾಲೂಕಿನ ಯಲಗೂರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಮಾತನಾಡಿದ ಅವರು ಮುದ್ದೇಬಿಹಾಳ ತಾಲೂಕಿನ ಯಲಗೂರೇಶ್ವರ ಗ್ರಾಮದಲ್ಲಿ ಇಂದು ವಾಸ್ತವ್ಯ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಲಾಗುತ್ತಿದ್ದು, ಪಕ್ಕದ ಕಾಸಿನಕುಂಟೆ, ಯಲ್ಲಮ್ಮನ ಬೂದಿಹಾಳ ಗ್ರಾಮಗಳನ್ನು ಸಹ ಗಣನೆಗೆ ತಗೆದುಕೊಂಡು ಈ ಗ್ರಾಮಗಳ ಸಮಸ್ಯೆಗಳನ್ನು ಪರಿಶೀಲಿಸಿ, ತಕ್ಷಣಕ್ಕೆ ಪರಿಹಾರ ಹಾಗೂ ಬಾಕಿ ಉಳಿಯುವ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ವಿಶೇಷ ಗಮನ ನೀಡುವ ಮೂಲಕ ಗ್ರಾಮಸ್ಥರ ಸಮಸ್ಯೆಗಳನ್ನು ಪರಿಹರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಗ್ರಾಮ ವಾಸ್ತವ್ಯ ಅಂಗವಾಗಿ ಇಂದು ಗ್ರಾಮಸ್ಥರು ನೀಡಿರುವ ಭವ್ಯ ಸ್ವಾಗತಕ್ಕೆ ಅಭಿನಂದನೆ ಸಲ್ಲಿಸಿದ ಅವರು ಗ್ರಾಮಸ್ಥರಿಂದ ಬಂದಿರುವ ವಿವಿಧ ಕುಂದುಕೊರತೆ ಅರ್ಜಿಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು ಈ ಗ್ರಾಮದಲ್ಲಿ ಹಳೆಯ ಆರೋಗ್ಯ ಕೇಂದ್ರ ತೆರವುಗೊಳಿಸಿ ನೂತನ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು. ಅಂಗನವಾಡಿ ಕೇಂದ್ರಕ್ಕೆ ಹಿರಿಯ ಮಹಿಳಾ ಸಹಾಯಕರ ಹುದ್ದೆ ನೇಮಕಾತಿ ಬಗ್ಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು. ಸದ್ಯಕ್ಕೆ ತಾತ್ಕಾಲಿಕವಾಗಿ ಈ ಹುದ್ದೆ ಭರ್ತಿಗೆ ಕ್ರಮಕೈಗೊಳ್ಳಲಾಗುವುದೆಂದು ಹೇಳಿದರು.
ಯಲಗೂರೇಶ್ವರ ಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಪರಿಹರಿಸಲಾಗುತ್ತದೆ. ರಾಷ್ಟ್ರೀಯ ಹೆದ್ದಾರಿಯಿಂದ ಈ ಗ್ರಾಮದವರೆಗೆ ದ್ವಿಪಥ ರಸ್ತೆಗಾಗಿ ಅನುದಾನ ಬಗ್ಗೆ ಶಾಸಕರ ಗಮನಕ್ಕೆ ತರಲಾಗುವುದು. ಕಾಸಿನಕುಂಟೆ ಗ್ರಾಮದಲ್ಲಿ ಶಾಲಾ ಕಟ್ಟಡ ನಿರ್ಮಾಣ ಹಾಗೂ ಬೂದಿಹಾಳದಲ್ಲಿ ನಿರ್ಮಿಸಿದ ಎರಡು ಶಾಲಾ ಕೊಠಡಿಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಹಿಂದುಳಿದ ವರ್ಗಗಳ ವಸತಿ ನಿಲಯ ನಿರ್ಮಾಣದ ಬಗ್ಗೆ ಸರ್ಕಾರದ ಮಾರ್ಗಸೂಚಿಯನ್ವಯ ಕ್ರಮಕೈಗೊಳ್ಳಲಾಗುವುದು. ಈ ಗ್ರಾಮದಲ್ಲಿ ಪಶು ಚಿಕಿತ್ಸಾ ಆಸ್ಪತ್ರೆ, ಆರೋಗ್ಯ ಇಲಾಖೆಗೆ ಪರ್ಯಾಯ ಜಾಗದ ವ್ಯವಸ್ಥೆ ಮಾಡಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಗೋವಿಂದ ರೆಡ್ಡಿ ಅವರು ಮಾತನಾಡಿ ಜಲಜೀವನ್ ಮಿಷನ್ ಯೋಜನೆಯಡಿ ಈ ಮೂರು ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಮುಂದಿನ ಒಂದು ವರ್ಷದ ಅವಧಿಯಲ್ಲಿ ಪರಿಹರಿಸಲು ಪ್ರಯತ್ನಿಸಲಾಗುವುದು. ಹೊಸ ಓವರ್ ಹೆಡ್ ಟ್ಯಾಂಕ್ ಮನೆ ಮನೆಗೆ ನಳದ ನೀರಿನ ಸೌಲಭ್ಯ ಹೆಚ್ಚುವರಿಯಾಗಿ ಒಂದು ಫೀಲ್ಟರ್ ಬೆಡ್ ನಿರ್ಮಾಣ ನಳಗಳ ಸಂಪರ್ಕಕ್ಕೆ ಎಚ್‍ಡಿಇಐ ಪೈಪ್ ಸೌಲಭ್ಯ, ಕಾಸಿನಕುಂಟೆ-ಯಲಗೂರವರೆಗೆ ರಸ್ತೆ ನಿರ್ಮಾಣ, ಸಿ.ಸಿ ರಸ್ತೆ ನಿರ್ಮಾಣ ಹಾಗೂ ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಕಾಮಗಾರಿ, ಉರ್ದು ಶಾಲೆ ಕಟ್ಟಡದ ಪುನರ್ ನಿರ್ಮಾಣ, ಶಾಲೆಗಳಿಗೆ ಶೌಚಾಲಯ ನಿರ್ಮಾಣ ಸೇರಿದಂತೆ ಇನ್ನೀತರ ವ್ಯವಸ್ಥೆ ಕಲ್ಪಿಸಲಾಗುವುದೆಂದು ಹೇಳಿದರು.
ಕೋವಿಡ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ಎಲ್ಲರೂ ಅವಶ್ಯಕ ಮುನ್ನೆಚ್ಚರಿಕೆ ವಹಿಸಬೇಕು. ಈ ಗ್ರಾಮದ 60 ವರ್ಷ ಮೇಲ್ಪಟ್ಟವರು ಹಾಗೂ ಬೇರೆ ಬೇರೆ ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷದಿಂದ 60 ವರ್ಷ ವಯೋಮಾನರೊಳಗಿನವರು ತಪ್ಪದೇ ಕೋವಿಡ್-19 ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಈ ಲಸಿಕೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮ ಇರದೇ ಇರುವುದರಿಂದ ತಪ್ಪದೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಪಿಂಚಣಿ ಪ್ರಮಾಣ ಪತ್ರ, ಭಾಗ್ಯಲಕ್ಷ್ಮೀ ಬಾಂಡ್, ವಿಶೇಷ ಚೇತನ ಮಗುವಿಗೆ ವ್ಹೀಲ್ ಚೇರ್ ವಿತರಣೆ ಮಾಡಿದ ಜೊತೆಗೆ ಗ್ರಾಮಗಳಲ್ಲಿ ಸಾರ್ವಜನಿಕರಿಂದ ಬಂದ ದೂರುಗಳಿಗೆ ಸ್ಪಂದಿಸಿ ಸ್ಮಶಾನಭೂಮಿ, ಸಾರ್ವಜನಿಕ ಶೌಚಾಲಯ, ಗ್ರಾಮಗಳಲ್ಲಿ ರಸ್ತೆ ಸೌಲಭ್ಯ, ರಸ್ತೆ ಒತ್ತುವರಿ ತೆರವು ಸೇರಿದಂತೆ ಮನೆಗಳ ಸೌಲಭ್ಯಗಳ ಬಗ್ಗೆ ಅರ್ಜಿಗಳಿಗೆ ಪರಿಹಾರ ನೀಡಿದರು.
ವಿದ್ಯಾರ್ಥಿಗಳೊಂದಿಗೆ ಸಂವಾದಃ ನಂತರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳು ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳುವ ಜೊತೆಗೆ ನಿರಂತರ ಅಧ್ಯಯನದ ಮೂಲಕ ಜೀವನದಲ್ಲಿ ಯಶಸ್ವಿ ಕಂಡುಕೊಳ್ಳಬೇಕು. ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಜೊತೆಗೆ ವೈಜ್ಞಾನಿಕ ಅವಲೋಕನ ಮಾಡುವುದನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.
ಅದರಂತೆ ಸರ್ಕಾರಿ ಶಾಲೆಗಳಲ್ಲಿ ವಿದ್ಯೆ ಪಡೆದಿರುವ ಹಲವರು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದು, ತಮ್ಮ ಉತ್ತಮ ಭವಿಷ್ಯಕ್ಕಾಗಿ ಉತ್ತಮ ನಡುವಳಿಕೆಯನ್ನು ಮೈಗೂಡಿಸಿಕೊಳ್ಳಬೇಕು. ಶಿಕ್ಷಣದಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು. ಗುರು ಹಿರಿಯರನ್ನು ಗೌರವಿಸಬೇಕು. ಉನ್ನತ ಹುದ್ದೆಯನ್ನು ಅಲಂಕರಿಸಲು ಮುಂದಾಲೋಚನೆ ಹಾಗೂ ಯೋಜನಾಬದ್ಧ ಜೀವನಶೈಲಿ ರೂಢಿಸಿಕೊಳ್ಳುವಂತೆ ತಿಳಿಸಿದ ಅವರು ಅವಶ್ಯಕ ಸಂದರ್ಭದಲ್ಲಿ ತಾವು ಮಾರ್ಗದರ್ಶನ ನೀಡುವುದಾಗಿ ಹೇಳಿದರು.
ಶಿಕ್ಷಕರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ನಿರಂತರ ತರಬೇತಿ ಮೂಲಕ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಲು ಪ್ರೋತ್ಸಾಹಿಸಬೇಕೆಂದು ತಿಳಿಸಿ ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನ, ಅಧ್ಯಯನದ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿ, ಮುಂದಿನ ದಿನಗಳಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸಾಧನೆಗಳ ಮೂಲಕ ಈ ಶಾಲೆಗೆ ವಿವಿಧ ವ್ಯವಸ್ಥೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಅವರು ಮಾತನಾಡಿ 8 ರಿಂದ 10 ನೇ ತರಗತಿಯಲ್ಲಿ ಉತ್ತಮ ರೀತಿಯಲ್ಲಿ ಅಧ್ಯಯನ ಮಾಡಿದವರು ಭವಿಷ್ಯದಲ್ಲಿ ಹೆಚ್ಚು ಯಶಸ್ವಿಯಾಗಲಿದ್ದು, ತಮ್ಮ ಭವಿಷ್ಯಕ್ಕಾಗಿ ನಿರಂತರ ಪ್ರಯತ್ನದ ಮೂಲಕ ಸಾಧನೆ ತೋರುವಂತೆ ತಿಳಿಸಿದ ಅವರು ಮುಂದಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಒಂದೇ ವರ್ಗದ ಎಲ್ಲ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದಲ್ಲಿ ಪುನಃ ತಾವು ಹಾಗೂ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ವಿದ್ಯಾರ್ಥಿಗಳ ಸನ್ಮಾನ ಮಾಡಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ತಹಶೀಲ್ದಾರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.