ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮ ವಹಿಸಿ – ಬಳ್ಳಾರಿ

ಬ್ಯಾಡಗಿ, ಮೇ28: ಗ್ರಾಮಾಂತರ ಪ್ರದೇಶಗಳಲ್ಲಿಯೂ ಕೋವಿಡ್ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಪಂ ಅಧ್ಯಕ್ಷರು, ಪಿಡಿಓ ಸೇರಿದಂತೆ ನೋಡೆಲ್ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದು ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಸೂಚನೆ ನೀಡಿದರು.
ಪಟ್ಟಣದ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಗುರುವಾರ ತಾಲೂಕಿನ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಕ್ಷರು ಮತ್ತು ಪಿಡಿಓಗಳಿಂದ ಮಾಹಿತಿ ಪಡೆದುಕೊಂಡರು.
ಪ್ರಾರಂಭದಲ್ಲಿ ಪಟ್ಟಣ ನಗರ, ಪ್ರದೇಶಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದ ಕೋವಿಡ್ ಸೋಂಕು ಪ್ರಕರಣಗಳು ಇತ್ತೀಚೆಗೆ ಗ್ರಾಮೀಣ ಭಾಗದಲ್ಲಿಯೂ ವ್ಯಾಪಕವಾಗಿ ವರದಿಯಾಗುತ್ತಿವೆ. ಹೀಗಾಗಿ ಗ್ರಾಮಾಂತರ ಪ್ರದೇಶಗಳಿಗೆ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕಿನ ಆರೋಗ್ಯ ಅಧಿಕಾರಿಗಳು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳೀಯ ಗ್ರಾಮ ಪಂಚಾಯಿತಿ ಪ್ರತಿನಿಧಿಗಳೊಂದಿಗೆ ಗ್ರಾಮೀಣ ಜನರಲ್ಲಿ ಕೋವಿಡ್ ನಿಯಂತ್ರಣ ಕುರಿತು ವಹಿಸಬೇಕಿರುವ ಮುಂಜಾಗ್ರತಾ ಕ್ರಮಗಳ ಪಾಲನೆ ಬಗ್ಗೆ ಅರಿವು ಉಂಟು ಮಾಡಬೇಕೆಂದು ತಿಳಿಸಿದರು.
ಸುರಕ್ಷತಾ ಕ್ರಮ ಅತ್ಯವಶ್ಯ..!!
ಕೊರೋನಾ ಹರಡದಂತೆ ತೆಗೆದುಕೊಳ್ಳಬೇಕಿರುವ ಸುರಕ್ಷತಾ ವಿಧಾನಗಳನ್ನು ಅನುಸರಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಕುರಿತು ಗ್ರಾಮಾಂತರ ಭಾಗಗಳಲ್ಲಿ ಹೆಚ್ಚು ತಿಳುವಳಿಕೆ ನೀಡಬೇಕು. ಮುನ್ನೆಚ್ಚರಿಕೆ ಸಂಬಂಧ ಆದೇಶ ಪಾಲನೆ ಮಾಡದೇ ಇರುವವರ ವಿರುದ್ಧ ದಂಡ ಮತ್ತಿತರ ನಿಯಮಾನುಸಾರ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ಸೋಂಕು ದೃಢಪಟ್ಟ ಪ್ರಕರಣಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರೆಂದು ಗುರುತಿಸಲಾಗುವವರನ್ನು ತಡ ಮಾಡದೇ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಸಂಪರ್ಕಿತರನ್ನು ಕರೆತರಲು ವಾಹನಗಳನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಆಕ್ಸಿಜನ್ ಹಾಗೂ ಇತರ ಸೌಲಭ್ಯಗಳ ಕೊರತೆಯಾಗದಂತೆ ಕ್ರಮ ವಹಿಸಿ…!!
ಕೋವಿಡ್ ಸೋಂಕು ಲಕ್ಷಣಗಳು ಕಾಣಿಸಿಕೊಂಡವವರನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗಳಿಗೆ ಕಳುಹಿಸಿಕೊಡಲು ಶಿಫಾರಸು ಮಾಡಬೇಕು. ಈ ಬಗ್ಗೆ ಖಾಸಗಿ ಕ್ಲಿನಿಕ್‍ಗಳ ವೈದ್ಯರಿಗೂ ಸಭೆ ಕರೆದು ಸೂಕ್ತ ಮಾರ್ಗದರ್ಶನ ಮಾಡಬೇಕು. ರೋಗಲಕ್ಷಣ ಹೊಂದಿರುವವರನ್ನು ಆರಂಭದಲ್ಲಿಯೇ ಆಸ್ಪತ್ರೆಗಳಿಗೆ ಕಳುಹಿಸಿ ತಪಾಸಣೆ ಮಾಡುವುದರಿಂದ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ಹೀಗಾಗಿ ತಾಲೂಕಿನ ಆರೋಗ್ಯ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕೆಂದು ಸೂಚಿಸಿದರು. ಅಲ್ಲದೇ ಈಗಾಗಲೇ ಸ್ಥಳೀಯ ಕೋವಿಡ್ ಆಸ್ಪತ್ರೆಗೆ ದಾಖಲಾಗಿರುವ ಸೋಂಕಿತರ ಆರೈಕೆ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸಬಾರದು. ಔಷಧ, ಅಮ್ಲಜನಕ, ಹಾಸಿಗೆಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ವಿಶೇಷವಾಗಿ ಮೆನು ಪ್ರಕಾರ ಗುಣಮಟ್ಟದ ಆಹಾರ ನೀಡುವಲ್ಲಿ ಯಾವುದೇ ಲೋಪವಾಗಬಾರದು. ಕೋವಿಡ್ ಲಸಿಕೆಯನ್ನು ಅದಷ್ಟು ಆಯಾ ಭಾಗದಲ್ಲೇ ಜನತೆ ಪಡೆದುಕೊಳ್ಳಲು ಅನುಕೂಲ ಕಲ್ಪಿಸಬೇಕಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷೆ ಸವಿತಾ ಸುತ್ತಕೋಟಿ, ಉಪಾಧ್ಯಕ್ಷೆ ಶಾಂತಮ್ಮ ದೇಸಾಯಿ, ಕಾರ್ಯನಿರ್ವಾಹಕ ಅಧಿಕಾರಿ ಎನ್. ತಿಮ್ಮಾರೆಡ್ಡಿ, ತಾಲೂಕಾ ಆರೋಗ್ಯಾಧಿಕಾರಿ ಡಾ. ಸುಹೀಲ್ ಹರವಿ, ಸಮಾಜ ಕಲ್ಯಾಣಾಧಿಕಾರಿ ಎಚ್.ಟಿ.ಲಮಾಣಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಿ.ಬಿ.ಪ್ರಸಾದಿಮಠ, ನರೇಗಾ ಸಹಾಯಕ ನಿರ್ದೇಶಕ ಶಂಕರ ಕಿಚಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.