ಗ್ರಾಮ ವಿಕಾಸಕ್ಕಾಗಿ ದುಡಿಯೋಣ: ಸಚಿವ ಪ್ರಭು ಚವ್ಹಾಣ್

ಬೀದರ:ಡಿ.31: ಗ್ರಾಮ ಪಂಚಾಯತಿ ಚುನಾವಣೆಯ ಫಲಿತಾಂಶ ಘೋಷಣೆಂisÀiÁಗಿದ್ದು, ಗೆದ್ದವರು ಮತ್ತು ಸೋತವರು ಸಹೋದರ ಭಾವನೆಯಿಂದ ಗ್ರಾಮ ವಿಕಾಸಕ್ಕೆ ದುಡಿಯಬೇಕೆಂದು ಪಶು ಸಂಗೋಪನೆ, ಹಜ್ ಮತ್ತು ವಕ್ಫ್ ಹಾಗೂ ಬೀದರ-ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ಸಲಹೆ ನೀಡಿದ್ದಾರೆ.

ಜಿಲ್ಲಾಡಳಿತ ಗ್ರಾಮ ಪಂಚಾಯಿತಿ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಿದೆ. ಜಿಲ್ಲೆಯಾದ್ಯಂತ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಇಲಾಖೆಗೆ ಸಹಕರಿಸಿ, ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ನೆರವಾಗಬೇಕು. ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಗ್ರಾಮಗಳಲ್ಲಿ ದ್ವೇಷ ಭಾವನೆ ತಲೆದೊರದಂತೆ ಗ್ರಾಮದ ಹಿರಿಯರು ಮುಂಜಾಗ್ರತೆ ವಹಿಸಬೇಕು. ಗೆದ್ದವರು ಮತ್ತು ಸೋತವರು ಜೊತೆಗೂಡಿ ಗ್ರಾಮದ ಅಭಿವೃದ್ದಿಗೆ ಪ್ರಯತ್ನಿಸಬೇಕು ಎಂದು ತಿಳಿಸಿದ್ದಾರೆ.

ಸಚಿವನಾಗಿ ನಾನು ಜಿಲ್ಲೆಯ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವೆ. ಗ್ರಾಮ ಸ್ವರಾಜ್ಯವೇ ನಮ್ಮ ಸರ್ಕಾರದ ಗುರಿಯಾಗಿದೆ. ಅದರಂತೆ ಗ್ರಾಮಗಳ ಅಭಿವೃದ್ಧಿಯನ್ನು ಆದ್ಯತೆಯಾಗಿ ಪರಿಗಣಿಸಿ, ನಾನಾ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗುತ್ತಿದೆ. ಗ್ರಾಮ ಪಂಚಾಯಿತಿಯ ನೂತನ ಸದಸ್ಯರು ಸರ್ಕಾರದ ಯೋಜನೆಗಳನ್ನು ಅರ್ಹ ಜನರಿಗೆ ತಲುಪಿಸಲು ಪ್ರಯತ್ನಿಸಬೇಕು ಎಂದು ಮನವಿ ಮಾಡಿದ್ದಾರೆ.

ಕೊರೊನಾ ಸೋಂಕು ಹರಡುವುದು ಇನ್ನೂ ನಿಂತಿಲ್ಲ. ಹಾಗಾಗಿ ಚುನಾವಣೆಯಲ್ಲಿ ಗೆದ್ದವರು ಹೆಚ್ಚು ಜನರೊಂದಿಗೆ ವೈಭವಯುತ ಮೆರವಣಿಗೆ ಮಾಡದೇ ಸರ್ಕಾರವು ಕೊರೊನಾ ನಿಯಂತ್ರಣಕ್ಕಾಗಿ ರೂಪಿಸಿರುವ ನಿಯಮಗಳನ್ನು ಪ್ರತಿಯೊಬ್ಬರೂ ಚಾಚು ತಪ್ಪದೇ ಪಾಲಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.