ಗ್ರೂಪ್ ‘ಸಿ’ ತಾಂತ್ರಿಕೇತರ ಹುದ್ದೆಗಳ ನೇಮಕಾತಿ ಪರೀಕ್ಷೆ:ಪರೀಕ್ಷಾ ಕೇಂದ್ರ 200 ಮೀ. ಸುತ್ತ ನಿಷೇಧಾಜ್ಞೆ

ಕಲಬುರಗಿ,ಡಿ.4: ಕರ್ನಾಟಕ ಲೋಕಸೇವಾ ಆಯೋಗವು ಗ್ರೂಪ್ ‘ಸಿ’ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಡಿ.5 ರಂದು ಕಲಬುರಗಿ ನಗರದ 42 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಅಂದು ಪರೀಕ್ಷಾ ಕೇಂದ್ರದ 200 ಮೀ. ಸುತ್ತ ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲ 5 ಗಂಟೆ ವರೆಗೆ ಕಲಂ 144 ನಿಷೇಧಾಜ್ಞೆ ಜಾರಿ ಮಾಡಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಅಂದು ಪರೀಕ್ಷಾ ಕೇಂದ್ರದ 200 ಮೀ. ಸುತ್ತಮುತ್ತ ಪರೀಕ್ಷಾ ಸಿಬ್ಬಂದಿ, ಅಧಿಕಾರಿಗಳು, ವಿದ್ಯಾರ್ಥಿಗಳು ಹೊರತುಪಡಿಸಿ ಇತರೆ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ.
ಇದಲ್ಲದೆ ವಿದ್ಯಾರ್ಥಿಗಳು ಮೊಬೈಲ್, ಬ್ಲೂಟೂಥ್, ವೈರ್‍ಲೆಸ್ ಸೆಟ್ ಸೇರಿದಂತೆ ಇನ್ನೀತರ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸುವುದನ್ನು ಸಹ ಸಿ.ಆರ್.ಪಿ.ಸಿ. ಕಾಯ್ದೆಯ ಕಲಂ 144ರನ್ವಯ ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.