ಚಾಮರಾಜನಗರ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ

????????????????????????????????????

ಚಾಮರಾಜನಗರ, ಅ.18- ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾಗಿ ನಗರದಲ್ಲೂ ಹಮ್ಮಿಕೊಂಡಿರುವ ನಾಲ್ಕು ದಿನಗಳ ಸರಳ ಹಾಗೂ ಸಾಂಪ್ರದಾಯಿಕ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆಯಿತು.
ಮೊದಲಿಗೆ ನಗರದ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿರುವ ಚಾಮರಾಜೇಶ್ವರಸ್ವಾಮಿ, ಚಾಮುಂಡೇಶ್ವರಿ ಅಮ್ಮನವರಿಗೆ ಪೂಜೆ ಸಲ್ಲಿಸಿ, ಬಳಿಕ ನಂದಿಧ್ವಜಕ್ಕೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ದಸರಾಗೆ ಸಾಂಪ್ರದಾಯಿಕ ಚಾಲನೆ ನೀಡಲಾಯಿತು.
ತದನಂತರ ಶ್ರೀ ಚಾಮರಾಜೇಶ್ವರ ದೇವಾಲಯದ ಆವರಣದೊಳಗೆ ಹಾಕಲಾಗಿರುವ ವೇದಿಕೆಯಲ್ಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಮರಾಜನಗರ ದಸರಾ ಮಹೋತ್ಸವ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಮೈಸೂರು ಜಿಲ್ಲೆಯ ಅವಿಭಾಜ್ಯ ಅಂಗವಾಗಿದ್ದ ಚಾಮರಾಜನಗರದಲ್ಲಿಯೂ ನಾಡಹಬ್ಬ ದಸರಾ ಮಹೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಹಿಂದೆ ಅದ್ದೂರಿಯಾಗಿ ನಡೆಸಿಕೊಂಡು ಬರಲಾಗುತ್ತಿದ್ದ ಚಾಮರಾಜನಗರ ದಸರಾ ಮಹೋತ್ಸವವನ್ನು ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ ಎಂದರು.
ಜಿಲ್ಲೆಯ ದಸರಾ ಆಚರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ 36 ಲಕ್ಷ ರೂಗಳನ್ನು ಬಿಡುಗಡೆಗೊಳಿಸಿದೆ. ಇದಕ್ಕಾಗಿ ಮುಖ್ಯಮಂತ್ರಿಯವರಿಗೆ ಅಭಿನಂದನೆ ಸಲ್ಲಿಸುವುದಾಗಿ ಶಾಸಕರು ನುಡಿದರು.
ಸ್ಥಳಿಯ ಕಲಾವಿದರ ಕಲೆ ಗುರುತಿಸಿ ಪ್ರೊತ್ಸಾಹಿಸುವ ನಿಟ್ಟಿನಲ್ಲಿ ನಾಲ್ಕು ದಿನಗಳ ಕಾಲವೂ ಸಾಂಸ್ಕøತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳು ಸೇರಿದಂತೆ ಪ್ರಸಕ್ತ ಸಾಲಿನ ದಸರಾ ಮಹೋತ್ಸವ ಯಶಸ್ವಿಯಾಗಲಿ ಎಂದು ಶಾಸಕರು ಹಾರೈಸಿದರು.
ಪ್ರಸ್ತುತ ಕೋವಿಡ್ ಕಾರಣದಿಂದ ಜನ ಜೀವನ ಸಂಕಷ್ಟದಲ್ಲಿದೆ. ಬಹಳ ಎಚ್ಚರಿಕೆಯಿಂದ ಪ್ರತಿಯೊಬ್ಬರೂ ಇರಬೇಕಿದೆ. ಆರೋಗ್ಯದ ಕಡೆ ಗಮನ ಕೊಡಬೇಕು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶಶಿಕಲಾ ಅವರು ಮಾತನಾಡಿ, ನಾಡಹಬ್ಬ ದಸರಾ ದೇಶದಲ್ಲೇ ಅಲ್ಲ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದೆ. ಮೈಸೂರು ಸಂಸ್ಥಾನ ಮಹಾರಾಜರು ಚಾಮರಾಜನಗರದಲ್ಲಿ ಜನಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ದಸರಾ ನಮ್ಮೆಲ್ಲರ ಹಬ್ಬವಾಗಿದ್ದು ಯಾವುದೇ ಜಾತಿ, ಭೇದಗಳ ಅಂತರವಿಲ್ಲದೆ ಪ್ರತಿಯೊಬ್ಬರು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದ ನಾಡಹಬ್ಬವನ್ನು ಈ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ.ಬಿ. ಶಾಂತಮೂರ್ತಿ ಅವರು ಮಾತನಾಡಿ ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚು ಜನಸಂದಣಿಯಾಗದಂತೆ ಈ ವರ್ಷದ ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಪ್ರತಿ ವರ್ಷದಂತೆ ಸಾಂಪ್ರಾದಾಯಿಕ ಕಾರ್ಯಗಳಿಗೆ ಸೀಮಿತಗೊಳಿಸಿ ಮುಂದುವರಿಸಲಾಗಿದೆ ಎಂದು ತಿಳಿಸಿದರು.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್‍ಕುಮಾರ್ ಅವರು ಇಂದಿನಿಂದ ಪ್ರಾರಂಭವಾಗಿರುವ ನಾಡಹಬ್ಬ ದಸರಾ ಹಿನ್ನಲೆಯಲ್ಲಿ ಸಮಸ್ತ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಚಾಮರಾಜನಗರ ಜಿಲ್ಲೆಯ ದಸರಾ ಹಬ್ಬದ ಉದ್ಘಾಟನೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಸಂದೇಶ ಹಂಚಿಕೊಂಡಿರುವ ಉಸ್ತುವಾರಿ ಸಚಿವರು ನಾಡಹಬ್ಬದ ಆಚರಣೆಯ ಯಶಸ್ಸಿಗೆ ಶುಭ ಕೋರಿದ್ದಾರೆ.
ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರಾದ ಎಂ. ಅಶ್ವಿನಿ, ಸದಸ್ಯರಾದ ಕೆರೆಹಳ್ಳಿ ನವೀನ್, ತಾಲ್ಲೂಕು ಪಂಚಾಯಿತಿಯ ಉಪಾಧ್ಯಕ್ಷರಾದ ಕೆ. ರವೀಶ್, ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನ್‍ಪುರಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ರಮೇಶ್, ಸಿ.ಜಿ.ವಿಶಾಲಾಕ್ಷಿ, ಗಣಪತಿ ಜಿ. ಬಾದಾಮಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಮಹಮ್ಮದ್ ರೋಷನ್ ಷಾ, ಅಪರ ಸಿವಿಲ್ ನ್ಯಾಯಾಧೀಶರಾದ ಎಸ್.ವಿ.ಸ್ಮಿತಾ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಹರ್ಷಲ್ ಭೊಯರ್ ನಾರಾಯಣ್‍ರಾವ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಬಿ. ಹದ್ದಣ್ಣನವರ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಚಾಮರಾಜೇಶ್ವರ ದೇವಾಲಯದ ಸಲಹಾ ಮಂಡಳಿಯ ಸದಸ್ಯರಾದ ಉಮ್ಮತ್ತೂರು ಇಂದುಶೇಖರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಗಿರೀಶ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.