ಚಾ.ನಗರ ಆಸ್ಪತ್ರೆಗೆ ಸುಧಾಕರ್ ಭೇಟಿ ನೀಡಲು ಸಿ.ಎಂ ಸೂಚನೆ

ಬೆಂಗಳೂರು, ಮೇ ೩- ಚಾಮರಾಜನಗರ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಆ ಮ್ಲಜನಕ ಸಿಗದೆ ೨೪ ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಸೂಚನೆ ನೀಡಿದ್ದಾರೆ.
ಈ ದುರಂತದ ಬಗ್ಗೆ ಮಾಹಿತಿ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದು ನಂತರ ತಕ್ಷಣವೇ ಚಾಮರಾಜನಗರಕ್ಕೆ ತೆರಳುವಂತೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಸೂಚಿಸಿದರು.
ದುರಂತ ನಡೆದಿರುವ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಹೋಗಿ ದುರಂತರದ ಕಾರಣದ ಬಗ್ಗೆ ವರದಿ ಕೊಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸುಧಾಕರ್ ಅವರಿಗೆ ಹೇಳಿದ್ದಾರೆ.
ಮುಖ್ಯಮಂತ್ರಿಗಳ ಸೂಚನೆಯಂತೆ ಸಚಿವ ಸುಧಾಕರ್ ಚಾಮರಾಜನಗರಕ್ಕೆ ತೆರಳಿದ್ದಾರೆ.
ತುರ್ತು ಸಂಪುಟ ಸಭೆ
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಜತೆಗೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿರುವ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ನಾಳೇ ಸಂಜೆ ಸಚಿವ ಸಂಪುಟದ ತುರ್ತು ಸಭೆ ಕರೆದಿದ್ದಾರೆ.
ಈ ಸಭೆಯಲ್ಲಿ ಕೋವಿಡ್ ನಿಯಂತ್ರಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆಗಳು ನಡೆಯಲಿದ್ದು, ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಚಿಕಿತ್ಸೆಗೆ ಗಮನಹರಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಮುಖ್ಯಮಂತ್ರಿಗಳು ನಾಳಿನ ಸಂಪುಟ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಿದ್ದಾರೆ ಎಂದು ಹೇಳಲಾಗಿದೆ.