ಚಿಂಚನಸೂರ ಪ್ರಮಾಣವಚನ ಸ್ವೀಕಾರ

ಬೆಂಗಳೂರು, ಆ. ೫- ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಬಿಜೆಪಿಯ ಬಾಬುರಾವ್ ಚಿಂಚನಸೂರ ಇಂದು ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸೌಧದಲ್ಲಿರುವ ವಿಧಾನ ಪರಿಷತ್ತಿನ ಸಭಾಪತಿಗಳ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹಂಗಾಮಿ ಸಭಾಪತಿ ರಘುನಾಥರಾವ ಮಲ್ಕಾಪುರೆ ಅವರ ಸಮ್ಮುಖದಲ್ಲಿ ಬಾಬುರಾವ್ ಚಿಂಚನಸೂರ್ ಅವರು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಚಿಂಚನಸೂರು ಹೇಳಿಕೆ
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಾಬುರಾವ್ ಚಿಂಚನಸೂರ್ ಅವರು, ನನ್ನನ್ನು ಗುರುತಿಸಿ ವಿಧಾನ ಪರಿಷತ್ತಿನ ಉಪಚುನಾವಣೆಗೆ ಆಯ್ಕೆ ಮಾಡಿರುವ ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕೋಲಿ ಸಮಾಜಕ್ಕೆ ಸೇರಿರುವ ತಮ್ಮನ್ನು ವಿಧಾನ ಪರಿಷತ್ ಸ್ಥಾನಕ್ಕೆ ಪರಿಗಣಿಸಿರುವುದಕ್ಕೆ ಧನ್ಯವಾದ ಎಂದರು.
ಬಿಜೆಪಿ ನನ್ನ ಶಕ್ತಿ ಗುರುತಿಸಿ ಸ್ಥಾನ ನೀಡಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದು ಕೆಲಸ ಮಾಡುತ್ತೇನೆ. ಕಲ್ಯಾಣ ಕರ್ನಾಟಕದಲ್ಲಿ ಶೇ. ೪೦ ರಷ್ಟು ಕೋಲಿ ಸಮಾಜದವರು ಇದ್ದಾರೆ. ಸಮಾಜದ ಸಂಪೂರ್ಣ ಬೆಂಬಲ ಬಿಜೆಪಿಗೆ ಸಿಗುವಂತೆ ಮಾಡುತ್ತೇನೆ ಎಂದರು.

ವಿಧಾನ ಪರಿಷತ್ ಹಂಗಾಮಿ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಸಮ್ಮುಖದಲ್ಲಿ ವಿಧಾನಪರಿಷತ್ ಸದಸ್ಯರಾಗಿ ಚಿಂಚಿನಸೂರ್ ರವರು ಪ್ರಮಾಣವಚನ ಸ್ವೀಕರಿಸಿದರು.