ಚಿಂತನ-ಮಂಥನ ಸಭೆ ನಾಳೆ

ಕಲಬುರಗಿ,ಜು 8: ವೀರಶೈವ ಲಿಂಗಾಯತ ಮಠಾಧೀಶರ ವೇದಿಕೆ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ಸಹಯೋಗದಲ್ಲಿ ನಾಳೆ ಬೆಳಿಗ್ಗೆ 10ಕ್ಕೆ ಶರಣಬಸವೇಶ್ವರ ಸಂಸ್ಥಾನದ ಪೂಜ್ಯ ಬಸವರಾಜಪ್ಪ ಅಪ್ಪಾ ಸಭಾಂಗಣದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಒಳಪಂಗಡಗಳನ್ನು ಕೇಂದ್ರ ಸರಕಾರದ ಒಬಿಸಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಚಿಂತನ – ಮಂಥನ ಸಭೆ ನಡೆಯಲಿದೆ.
ಈ ಕುರಿತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಶರಣಕುಮಾರ್ ಮೋದಿ ಪ್ರಕಟಣೆ ನೀಡಿದ್ದು, ಕಾಶಿ, ಉಜ್ಜಯಿನಿ ಜಗದ್ಗುರುಗಳು, ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಮಠಾಧೀಶರು, ಒಳಪಂಗಡಗಳ ಮಠಾಧೀಶರು, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಖಂಡ್ರೆ, ಅಲ್ಲಮಪ್ರಭು ಪಾಟೀಲ್, ಬಿ.ಆರ್.ಪಾಟೀಲ್, ಎಂ.ವೈ.ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಶಶಿಲ್ ನಮೋಶಿ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಸೇರಿದಂತೆ ಇನ್ನಿತರ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹಾಗಾಗಿ, ವೀರಶೈವ-ಲಿಂಗಾಯತ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವೀರಶೈವ ಲಿಂಗಾಯತದ ಎಲ್ಲ ಒಳಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆ ಹಕ್ಕೊತ್ತಾಯಕ್ಕೆ ತಮ್ಮ ಕೈ ಜೋಡಿಸಬೇಕೆಂದು ಶರಣಕುಮಾರ ಮೋದಿ ಮನವಿ ಮಾಡಿದ್ದಾರೆ.