ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಗೆಲುವು; ಮೊಯ್ಲಿ ವಿಶ್ವಾಸ

ಚಿಕ್ಕಬಳ್ಳಾಪುರ ಜ. ೨೧-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಾಕ್ಟರ್ ಎಂ ವೀರಪ್ಪ ಮೊಯ್ಲಿ ತಿಳಿಸಿದರು.
ತಾಲೂಕಿನ ನಂದಿ ಗ್ರಾಮದಲ್ಲಿರುವ ಶ್ರೀ ಭೋಗ ನಂದೀಶ್ವರ ಸ್ವಾಮಿ ದೇವಾಲಯಕ್ಕೆ ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿ ನಂತರ ಕಾಂಗ್ರೆಸ್ ಮುಖಂಡರೊಂದಿಗೆ ಮಾತನಾಡಿದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಸದಸ್ಯ ಹಾಗೂ ರಾಜ್ಯ ಸರ್ಕಾರದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾಕ್ಟರ್ ಕೆ ಸುಧಾಕರ್ ಅವರು ಕೇವಲ ತಮ್ಮ ವೈಯಕ್ತಿಕ ಪ್ರತಿಷ್ಠೆ ಬೆಳೆಸಿಕೊಳ್ಳಲು ಮಾತ್ರ ಸೀಮಿತವಾಗಿದ್ದು ಕ್ಷೇತ್ರದ ಅಭಿವೃದ್ಧಿಯನ್ನು ಕಡೆಗಣಿಸಿದ್ದಾರೆ ಪ್ರತಿನಿತ್ಯ ಇವರ ಮುಖವನ್ನು ಬ್ಯಾನರ್ ಗಳಲ್ಲಿ ನೋಡಿ ನೋಡಿ ಈ ಭಾಗದ ಜನತೆಗೆ ಸಾಕಾಗಿದೆ. ಜನತೆ ಇವರ ಮೇಲಿಟ್ಟಿರುವ ವಿಶ್ವಾಸವನ್ನು ಡಾಕ್ಟರ್ ಕೆ ಸುಧಾಕರ್ ಕಳೆದುಕೊಂಡಿದ್ದಾರೆ ಈ ಕಾರಣದಿಂದ ಈ ಬಾರಿ ಸುಧಾಕರ್ ಶಾಸಕರಾಗಿ ಆಯ್ಕೆ ಆಗುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದರು.
ಇದೇ ಸಂದರ್ಭದಲ್ಲಿ ೨೦೨೩ರ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅರ್ಜಿ ಸಲ್ಲಿಸಿರುವ ಯಲವಹಳ್ಳಿ ಎನ್ ರಮೇಶ್ ಎನ್ ವಿನಯ್ ಶಾಮ್ ಕೆಎನ್ ರಘು, ಮಂಡಿಕಲ್ ಬ್ಲಾಕ್ ಮಾಜಿ ಅಧ್ಯಕ್ಷ ಲಾಯರ್ ನಾರಾಯಣಸ್ವಾಮಿ ಗಂಗರ ಕಾಲುವೆ ನಾರಾಯಣ ಸ್ವಾಮಿ ಮಾಜಿ ಶಾಸಕ ಎಂ ಶಿವಾನಂದ ಒಳಗೊಂಡಂತೆ ಮತ್ತೆ ಈ ಸಂದರ್ಭದಲ್ಲಿ ಹಾಜರಿದ್ದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯವಾಗಿ ಅರ್ಜಿ ಸಲ್ಲಿಸಿರುವ ನಾವೆಲ್ಲರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಡಾಕ್ಟರ್ ವೀರಪ್ಪ ಮೊಯ್ಲಿ ರವರ ಕೈ ಮೇಲೆ ಕೈಗಾರಿಕೆ ಶಪಥ ಮಾಡಿದರು.
ಚಿಕ್ಕಬಳ್ಳಾಪುರ ತಾಲೂಕಿನ ಹಲವಾರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಪೂರ್ವಭಾವಿ ಸಭೆ ಏರ್ಪಡಿಸಲಾಗಿದ್ದು ಅವುಗಳ ವಿವರವನ್ನು ಡಾಕ್ಟರ್ ಕೆ ಎನ್ ರಘು ವಿವರಿಸಿದ್ದರು.
ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಜಾಧ್ವನಿ ಬಸ್ ಯಾತ್ರೆ ಸಮಾವೇಶಕ್ಕೆ ಜನವರಿ ೨೩ರಂದು ಆಗಮಿಸಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಯಶಸ್ವಿಗಾಗಿ ತಾಲೂಕಿನ ವಿವಿಧ ಪಂಚಾಯಿತಿಗಳು ಕೇಂದ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.