ಚಿತ್ರದುರ್ಗಕ್ಕೆ ಮೆಡಿಕಲ್ ಕಾಲೇಜು;೩೦ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಲಹೆ


ಚಿತ್ರದುರ್ಗ.ನ.೧೩: ಜಿಲ್ಲಾ ಕೇಂದ್ರದಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭಿಸುವ ಮೂಲಕ ಜನರಿಗೆ ಉತ್ಕೃಷ್ಟವಾದ ಆರೋಗ್ಯ ಸೇವೆಯನ್ನು ನೀಡಬೇಕು ಎಂಬ ಉದ್ದೇಶ ಹೊಂದಿದ್ದು, ಶೀಘ್ರವೇ ಕಾಮಗಾರಿ ಪ್ರಾರಂಭಿಸಿ ೩೦ ತಿಂಗಳ ಒಳಗೆ ಕಾಮಗಾರಿ ಫೂರ್ಣಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದರು.
ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸ್ಥಳ ಪರೀಶಿಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜಿನ ಜೊತೆಗೆ ಪ್ಯಾರಾ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಿದ್ದು, ಎಲ್ಲಾ ಮಾದರಿಯ ಅರೆ ವೈದ್ಯಕೀಯ ಕೋರ್ಸ್ ಆರಂಭಿಸಲಾಗುವುದು ಎಂದರು.
ಕೇಂದ್ರ ಸರ್ಕಾರದಿಂದ ಯಾವುದೇ ಅನುದಾನ ಇಲ್ಲದೇ, ರಾಜ್ಯ ಸರ್ಕಾರದಿಂದಲೇ ಸಂಪೂರ್ಣ ಅನುದಾನ ಮಂಜೂರಿಗೆ ಸರ್ಕಾರ ಕ್ರಮಕೈಗೊಂಡಿದ್ದು ಮುಂದಿನ ೩೦ ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಈಗಾಗಲೇ ಪ್ರಸ್ಥಾವನೆ ಸಲ್ಲಿಕೆಯಾಗಿದ್ದು ೫೦ ಕೋಟಿ ರೂ. ಮಂಜೂರಿಗೆ ಸಿಎಂ ಆದೇಶ ಮಾಡಿದ್ದಾರೆ ಎಂದು ಹೇಳಿದರು.
ಕೊರೊನಾ ಲಸಿಕೆ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ಯಶಸ್ವಿಯಾಗಿದ್ದು, ಕ್ಲಿನಿಕಲ್ ಟ್ರಯಲ್ ಯಶಸ್ಸಿನ ಬಗ್ಗೆ ಪ್ರತಿಷ್ಟಿತ ಸಂಸ್ಥೆಗಳಿಂದ ಸ್ಪಷ್ಟನೆ ಸಿಕ್ಕಿದ್ದು, ಮಾರ್ಚ್ ಏಪ್ರಿಲ್ ಒಳಗೆ ಕೋವಿಡ್ ಲಸಿಕೆ ದೊರೆಯುವ ನಿರೀಕ್ಷೆ ಇದೆ ಎಂದರು.
ಸ್ಥಳ ಪರಿಶೀಲನೆ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸ್ಥಳೀಯ ಶಾಸಕರುಗಳಾದ ಜಿಹೆಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಪೂರ್ಣಿಮಾ ಕೆ.ಶ್ರೀನಿವಾಸ್, ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಡಿಸಿ ಕವಿತಾ ಎಸ್.ಮನ್ನಿಕೇರಿ ಸೇರಿದಂತೆ ರಾಜಕೀಯ ಮುಖಂಡರು, ಅಧಿಕಾರಿಗಳು ಹಾಜರಿದ್ದರು.
೧೩ಡಿಪಿಹೆಚ್೩