ಕೈ ಪ್ರಣಾಳಿಕೆ ಸಮಿತಿಯಲ್ಲಿ ಸಿದ್ದುಗೆ ಸ್ಥಾನ

ಚಿದು ಅಧ್ಯಕ್ಷ
ನವದೆಹಲಿ,ಡಿ.೨೩- ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ೧೬ ಮಂದಿಯ ತನ್ನ ಪ್ರಣಾಳಿಕೆ ಸಮಿತಿ ರಚಿಸಿದ್ದು, ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ.ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ದೇವ್ ಅವರನ್ನು ಸಮಿತಿಯ ಸಂಚಾಲಕರನ್ನಾಗಿ ಮಾಡಲಾಗಿದೆ.
೧೬ ಸದಸ್ಯರ ಸಮಿತಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇದ್ದಾರೆ.
ಸಮಿತಿಯಲ್ಲಿ ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ, ಜೈರಾಮ್ ರಮೇಶ್ ಮತ್ತು ಶಶಿ ತರೂರ್, ರಂಜಿತ್ ರಂಜನ್, ಜಿಗ್ನೇಶ್ ಮೇವಾನಿ ಸೇರಿದಂತೆ ಹಲವು ನಾಯಕರನ್ನು ಸಮಿತಿಯಲ್ಲಿ ಸೇರಿಸಲಾಗಿದೆ.
ಅಖಿಲ ಭಾರತ ವೃತ್ತಿಪರರ ಕಾಂಗ್ರೆಸ್ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ ಅವರೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಣಿಪುರದ ಮಾಜಿ ಉಪಮುಖ್ಯಮಂತ್ರಿ ಗೈಖಂಗಮ್ ಮತ್ತು ಲೋಕಸಭೆಯಲ್ಲಿ ಪಕ್ಷದ ಉಪ ನಾಯಕ ಗೌರವ್ ಗೊಗೊಯ್ ಕೂಡ ಸಮಿತಿಯಲ್ಲಿದ್ದಾರೆ.
ಚುನಾವಣೆಗೆ ಪಕ್ಷದ ಕಾರ್ಯಸೂಚಿಯನ್ನು ಅಂತಿಮಗೊಳಿಸುವ ಪ್ರಮುಖ ಸಮಿತಿಯ ಇತರ ಸದಸ್ಯರು ಇಮ್ರಾನ್ ಪ್ರತಾಪ್‌ಗರ್ಹಿ, ಕೆ ರಾಜು, ಓಂಕಾರ್ ಸಿಂಗ್ ಮಾರ್ಕಮ್, ರಂಜೀತ್ ರಂಜನ್, ಜಿಗ್ನೇಶ್ ಮೇವಾನಿ ಮತ್ತು ಗುರುದೀಪ್ ಸಪ್ಪಲ್ ಅವರನ್ನು ನೇಮಕ ಮಾಲಾಡಿದೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮಾತನಾಡಿ, “ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆ ಮೇರೆಗೆ ಮುಂಬರುವ ಸಾರ್ವತ್ರಿಕ ಚುನಾವಣೆ ೨೦೨೪ ಗಾಗಿ ತಕ್ಷಣವೇ ಜಾರಿಗೆ ಬರುವಂತೆ ಪ್ರಣಾಳಿಕೆ ಸಮಿತಿಯನ್ನು ರಚಿಸಿದ್ದಾರೆ” ಎಂದು ತಿಳಿಸಿದ್ದಾರೆ
ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಲು ಪಕ್ಷವು ಶೀಘ್ರದಲ್ಲೇ ಸಮಿತಿಗಳನ್ನು ರಚಿಸಲಿದೆ. ಲೋಕಸಭೆ ಸ್ಥಾನಕ್ಕೆ ವೀಕ್ಷಕರನ್ನು ನೇಮಿಸುವುದರ ಜೊತೆಗೆ ಅಭ್ಯರ್ಥಿಗಳ ಆಯ್ಕೆಗಾಗಿ ಪಕ್ಷ ಸ್ಕ್ರೀನಿಂಗ್ ಸಮಿತಿ ಸಹ ರಚಿಸಲಿದೆ ಎಂದಿದ್ಧಾರೆ.
ಶೀಘ್ರ ಅಭ್ಯರ್ಥಿಗಳು ಅಂತಿಮ
೨೦೨೪ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಇಂಡಿಯಾ ಮೈತ್ರಿಕೂಟದ ಜತೆಗೂಡಿ ಅಧಿಕಾರ ಹಿಡಿಯಲು ಮುಂದಾಗಿದ್ದು ಶೀಘ್ರದಲ್ಲಿ ಅಭ್ಯರ್ಥಿಗಳನ್ನು ಪ್ರಕಟಿಸಲು ಮುಂದಾಗಿದೆ.
ಕಾಂಗ್ರೆಸ್ ಪಕ್ಷದ ನಿರ್ಣಾಯಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಪಕ್ಷ ತನ್ನ ಲೋಕಸಭಾ ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚಿಸಿದ್ದು ಶೀಘ್ರದಲ್ಲೇ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವುದಾಗಿ ಹೇಳಿದೆ.