
ನವದೆಹಲಿ,ಮಾ.೨- ಸಂಸತ್ತಿನಲ್ಲಿ ಹೊಸದಾಗಿ ಕಾನೂನು ರೂಪಿಸುವ ತನಕ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ, ಮತ್ತು ಆಯುಕ್ತರನ್ನು ಪ್ರಧಾನಿ, ವಿರೋಧ ಪಕ್ಷದ ನಾಯಕರು ಹಾಗು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ನೇಮಕ ಮಾಡುವಂತೆ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.ಕೇಂದ್ರ ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಅಪಸ್ವರ ಕೇಳಿ ಬಂದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಕೆ.ಎಂ ಜೋಸೆಪ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಸರ್ವಾನುಮತದ ತೀರ್ಪಿನಲ್ಲಿ ಆದೇಶ ಹೊರಡಿಸಿದೆ.
ಚುನಾವಣಾ ಆಯುಕ್ತರು ಮತ್ತು ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ಬ್ಯಾಚ್‌ಗೆ ಪೀಠ ಈ ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಈ ಕ್ರಮ ಅನಿವಾರ್ಯ ಎಂದು ಹೇಳಿದೆ.
ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಕಾನೂನು ರಚಿಸುವವರೆಗೆ ಈ ನಿಯಮ ಚಾಲ್ತಿಯಲ್ಲಿರಲಿದೆ. ಪ್ರಧಾನ ಮಂತ್ರಿ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ನೇಮಕ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಅತಿದೊಡ್ಡ ಪಕ್ಷದ ನಾಯಕ ಸಮಿತಿಯ ಭಾಗ:
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಇಲ್ಲದಿದ್ದರೆ, ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ನೇಮಿಸುವ ಸಮಿತಿಯಲ್ಲಿ ಲೋಕಸಭೆಯಲ್ಲಿ ಏಕೈಕ ದೊಡ್ಡ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕನ ಸ್ಥಾನದಲ್ಲಿರುತ್ತಾರೆ ಎಂದೂ ಕೂಡ ತೀರ್ಪಿನಲ್ಲಿ ತಿಳಿಸಿದೆ.ನ್ಯಾಯಮೂರ್ತಿ ಜೋಸೆಫ್ ಅವರು ನೀಡಿದ ತೀರ್ಪಿಗೆ ಸಮ್ಮತಿಸಿದ ನ್ಯಾಯಮೂರ್ತಿ ರಸ್ತೋಗಿ ಅವರು ತಮ್ಮ ತರ್ಕದೊಂದಿಗೆ ಪ್ರತ್ಯೇಕ ತೀರ್ಪು ನೀಡಿದ್ದಾರೆ.ಪ್ರಜಾಪ್ರಭುತ್ವದಲ್ಲಿ ಚುನಾವಣೆ ನಿಸ್ಸಂದೇಹವಾಗಿ ನ್ಯಾಯಯುತವಾಗಿರಬೇಕು ಪರಿ ಶುದ್ಧತೆಯನ್ನು ಕಾಪಾಡಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.
ಚುನಾವಣಾ ಆಯೋಗ ಸಾಂವಿಧಾನಿಕ ಚೌಕಟ್ಟಿನೊಳಗೆ ಮತ್ತು ಕಾನೂನಿನೊಳಗೆ ಕಾರ್ಯನಿರ್ವಹಿಸಬೇಕು ಮತ್ತು ಅದು ಅನ್ಯಾಯದ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ .ಮುಕ್ತ ಮತ್ತು ನ್ಯಾಯಯುತ ಪಾತ್ರವನ್ನು ಖಚಿತಪಡಿಸಿಕೊಳ್ಳದ ಚುನಾವಣಾ ಆಯೋಗ ಪ್ರಜಾಪ್ರಭುತ್ವದ ತಳಹದಿಯಾಗಿರುವ ಕಾನೂನಿನ ನಿಯಮದ ಪಾಲನೆ ಖಾತರಿಪಡಿಸುತ್ತದೆ ಎಂದು ಅದು ಹೇಳಿದೆ.
ಚುನಾವಣಾ ಆಯುಕ್ತರು, ಮುಖ್ಯ ಆಯುಕ್ತರ ನೇಮಕಕ್ಕೆ ಸಮಿತಿ
ಪ್ರಧಾನಿ,ವಿರೋಧ ಪಕ್ಷದ ನಾಯಕ ಹಾಗು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ನೇತೃತ್ವದ ಸಮಿತಿ
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಇಲ್ಲದಿದ್ದರೆ ಅತಿ ದೊಡ್ಡ ಪಕ್ಷದ ನಾಯಕ ಸಮಿತಿಯ ಭಾಗ
ನ್ಯಾಯಮೂರ್ತಿ ನ್ಯಾಯಮೂರ್ತಿ ಕೆ.ಎಂ ಜೋಸೆಪ್ ನೇತೃತ್ವದ ಐವರು ನ್ಯಾಯಾಧೀಶರ ಪೀಠ ತೀರ್ಪು
ಚುನಾವಣೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲು ಹೊಸ ಅಸ್ತ್ರ