ಚುನಾವಣೆ ಆಯೋಗಕ್ಕೆ ಮದ್ರಾಸ್ ಹೈಕೋರ್ಟ್ ತಪರಾಕಿ

ಚೆನ್ನೈ ಏ.೨೬- ದೇಶದ ವಿವಿಧ ಭಾಗಗಳಲ್ಲಿ ಕೊರೊನಾ ಸೋಂಕು ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದರೂ ಚುನಾವಣಾ ಪ್ರಚಾರ ಸಭೆಗಳಿಗೆ ಅವಕಾಶ ಮಾಡಿಕೊಟ್ಟ ಕೇಂದ್ರ ಚುನಾವಣಾ ಆಯೋಗದ ಕ್ರಮವನ್ನು ಮದ್ರಾಸ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಕೋವಿಡ್ ಸೋಂಕು ಹೆಚ್ಚುತ್ತಿರುವ ಸಮಯದಲ್ಲಿ ಚುನಾವಣಾ ಪ್ರಚಾರ ಸಭೆಗಳಿಗೆ ಅನುಮತಿ ನೀಡಿದರೆ ಆಯೋಗದ ಅಧಿಕಾರಿಗಳ ವಿರುದ್ಧ ಕೊಲೆ ಆರೋಪದ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀಬ್ ಮುಖರ್ಜಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ

ದೇಶದಲ್ಲಿ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅದರ ಜವಾಬ್ದಾರಿಯನ್ನು ಚುನಾವಣಾ ಆಯೋಗ ಹೊರಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

ಇನ್ನು ಮುಂದೆ ಚುನಾವಣಾ ಸಭೆಗಳಿಗೆ ಆಯೋಗ ಅನುಮತಿ ನೀಡಿದರೆ ಮುಲಾಜಿಲ್ಲದೆ ಆಯೋಗದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ತಮಿಳುನಾಡಿನ ಕರೂರು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮದ್ರಾಸ್ ಹೈಕೋರ್ಟ್ ಚುನಾವಣಾ ಆಯೋಗದ ಅಧಿಕಾರಿಗಳ ವಿರುದ್ಧ ಹರಿಹಾಯ್ಧಿದೆ.

ಆಯೋಗ ವಿಫಲ:.

ದೇಶದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು ಚುನಾವಣಾ ಪ್ರಚಾರ ಸಭೆಗಳಿಗೆ ಅನುಮತಿ ನೀಡುವ ಮೂಲಕ ಸೋಂಕು ಹೆಚ್ಚಳಕ್ಕೆ ಪರೋಕ್ಷವಾಗಿ ಆಯೋಗ ಕಾರಣವಾಗಿದೆ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ಸೋಂಕು ಹೆಚ್ಚಳವೇ ಸಮಯದಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಲ್ಲಿ ಕೂಡ ಚುನಾವಣಾ ಆಯೋಗ ಸಂಪೂರ್ಣವಾಗಿ ವಿಫಲವಾಗಿದೆ ಎಂದು ನ್ಯಾಯಾಲಯ ಅಸಮಾಧಾನ ಹೊರಹಾಕಿದೆ.

ಕೊರೊನಾ ಸೋಂಕು ವಿಪರೀತ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಕೊಡು ಕೊಡು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಸೂಚಿಸಿದೆ.