ಚುನಾವಣೆ ಘೋಷಣೆಗೆ ಕ್ಷಣಗಣನೆ

ಬೆಂಗಳೂರು,ಮಾ.೨೪-ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಕೇಂದ್ರ ಚುನಾವಣಾ ಆಯೋಗ ಎಲ್ಲ ತಯಾರಿ ಮಾಡಿಕೊಂಡಿದ್ದು, ಯಾವುದೇ ಕ್ಷಣದಲ್ಲಿ ಚುನಾವಣಾ ಘೋಷಣೆಗಳು ಆಗಲಿವೆ.ರಾಜ್ಯದ ಜಂಟಿ ಮುಖ್ಯ ಚುನಾವಣಾಧಿಕಾರಿಗಳು ಚುನಾವಣೆ ಘೋಷಣೆ ಯಾವುದೇ ಕ್ಷಣದಲ್ಲಿ ಆಗಲಿದೆ ಎಂಬ ಸುಳಿವನ್ನು ನೀಡಿದ್ದಾರೆ.
ಜಿಲ್ಲಾ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುವ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಮಹಾನಗರ ಪಾಲಿಕೆಯ ಆಯುಕ್ತರುಗಳಿಗೆ ರಾಜ್ಯದ ಜಂಟಿ ಮುಖ್ಯ ಚುನಾವಣಾಧಿಕಾರಿಗಳ ಪರವಾಗಿ ಪತ್ರ ಬರೆದು ಏಪ್ರಿಲ್, ಮೇ ನಲ್ಲಿ ನಡೆಯಬೇಕಿರುವ ರಾಜ್ಯವಿಧಾನಸಭೆ ಚುನಾವಣೆಗೆ ಯಾವುದೇ ಕ್ಷಣದಲ್ಲಿ ಚುನಾವಣೆ ದಿನಾಂಕದ ಘೋಷಣೆಯಾಗುವ ಸಾಧ್ಯತೆಗಳಿವೆ. ಹಾಗಾಗಿ, ಎಲ್ಲ ಜಿಲ್ಲಾಧಿಕಾರಿಗಳು ಪ್ರಮುಖ ಕೆಲಸ ಕಾರ್ಯಗಳನ್ನು ಚುನಾವಣಾ ದಿನಾಂಕ ನಿಗದಿ ಘೋಷಣೆಗೂ ಮೊದಲೇ ಪೂರ್ಣಗೊಳಿಸುವಂತೆ ಪತ್ರ ಮುಖೇನ ಸೂಚನೆ ರವಾನಿಸಿದ್ದು, ಹಾಗೆಯೇ
ಚುನಾವಣಾ ಘೋಷಣೆ ಆದ ನಂತರ ಕಟ್ಟುನಿಟ್ಟಾಗಿ ನೀತಿ ಸಂಹಿತೆ ಜಾರಿಗೂ ಕ್ರಮಕೈಗೊಳ್ಳುವಂತೆ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಮುಖ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆಯೂ ಕೇಂದ್ರ ಚುನಾವಣಾ ಆಯೋಗ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇದರ ಜೊತೆಗೆ ನೀತಿ ಸಂಹಿತೆಯ ಸಿದ್ಧತೆಗೂ ಜಿಲ್ಲಾಧಿಕಾರಿಗಳಿಗೆ ತ್ವರಿತ ಸಂದೇಶ ರವಾನಿಸಿದೆ.ಮೂಲಗಳ ಪ್ರಕಾರ ರಾಜ್ಯ ವಿಧಾನಸಭೆಗೆ ಏಪ್ರಿಲ್ ಕೊನೆಯ ವಾರ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ಚುನಾವಣೆಗಳು ನಡೆಯಲಿದ್ದು, ಈ ಸಂಬಂಧ ಚುನಾವಣಾ ಆಯೋಗ ಮುಂದಿನವಾರ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಚುನಾವಣೆ ಘೋಷಣೆ ಸಂಬಂಧ ಕೇಂದ್ರ ಚುನಾವಣಾ ಆಯೋಗ ಮಾ.೨೭ ಅಥವಾ ೨೮ ರಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಲಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ. ಈ ಹಿಂದೆ ಮುಖ್ಯ ಚುನಾವಣಾ ಆಯುಕ್ತರು ಮೂರು ದಿನಗಳ ಕಾಲ ಭೇಟಿ ನೀಡಿ ಚುನಾವಣಾ ತಯಾರಿ ಕುರಿತಂತೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ಜೊತೆ ಚರ್ಚೆ ನಡೆಸಿದ್ದರು. ಇದಾದ ಬಳಿಕ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೂ ಮಹತ್ವದ ಸಭೆ ನಡೆಸಿ ಚುನಾವಣಾ ತಯಾರಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದ್ದರು. ಅದರಲ್ಲೂ ಮತದಾರರಿಗೆ ಆಮಿಷವೊಡ್ಡುವ ಬಗ್ಗೆ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆಯೂ ಜಿಲ್ಲಾಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ತಾಕೀತು ಮಾಡಿತ್ತು.
ಈಗಾಗಲೇ ಆಡಳಿತಾರೂಢ ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಚಾರದ ಅಖಾಡಕ್ಕೆ ಧುಮುಕಿ ಅಬ್ಬರದ ಪ್ರಚಾರದಲ್ಲಿ ತೊಡಗಿ ಮತಬೇಟೆ ಆರಂಭಿಸಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಚುನಾವಣಾ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.
ಇವೆಲ್ಲದರ ನಡುವೆ ನಾಳೆ ಮತ್ತೆ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಕೆ.ಆರ್.ಪುರ -ವೈಟ್ ಫೀಲ್ಡ್ ಮೆಟ್ರೋ ಮಾರ್ಗ ಲೋಕಾರ್ಪಣೆ ಕಾರ್ಯಕ್ರಮದ ಬಗ್ಗೆ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಇದಾದ ಬಳಿಕ ಚಿಕ್ಕಾಬಳ್ಳಾಪುರಕ್ಕೆ ತೆರಳಿ ಮೆಡಿಕಲ್ ಕಾಲೇಜು ಲೋಕಾರ್ಪಣೆ ಹಾಗೂ ಬೆಣ್ಣೆನಗರಿ ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಈ ಸಮಾರೋಪ ಸಮಾರಂಭದಲ್ಲಿ ಹತ್ತು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ.
ಮತ್ತೊಂದೆಡೆ ಪ್ರತಿ ಪಕ್ಷ ಶತಯಾ-ಗತಾಯ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ಪಣ ತೊಟ್ಟಿದ್ದು, ಮತದಾರರಿಗೆ ಹಲವು ಉಚಿತ ಗ್ಯಾರಂಟಿ ಭರವಸೆಗಳನ್ನು ನೀಡಿ ಬಿಜೆಪಿಯ ಆಡಳಿಯ ವಿರೋಧಿ ಅಲೆ ಸಮರ್ಥವಾಗಿ ಬಳಸಿಕೊಳ್ಳಲು ಮುಂದಾಗಿದೆ. ಈಗಾಗಲೇ ರಾಜ್ಯಾದ್ಯಂತ ಪ್ರಜಾಧ್ವನಿ ಯಾತ್ರೆ ಯಶಸ್ವಿಯಾಗಿ ನಡೆಸಿದೆ.
ಜಾತ್ಯಾತೀತ ಜನತಾದಳವು ಪ್ರಚಾರದ ಅಖಾಡದಲ್ಲಿ ಸೆಡ್ಡು ಹೊಡೆದಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ ಕೈಗೊಂಡು ಮತದಾರರ ಮನ ಗೆಲ್ಲಲು ಮುಂದಾಗಿದ್ದಾರೆ. ಈ ತಿಂಗಳ ೨೬ ರಂದು ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದ್ದು, ಮೈಸೂರಿನಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ.