ಚುನಾವಣೆ ಸಿದ್ಧತಾ ಕಾರ್ಯಗಳ ಬಗ್ಗೆ ನಿಗಾ ಇರಿಸಲು ತಹಶೀಲ್ದಾರರಿಗೆ ಡಿಸಿ ವೆಂಕಟೇಶ್ ಸೂಚನೆ

ಸಂಜೆವಾಣಿ ವಾರ್ತೆ
ಚಿತ್ರದುರ್ಗ ಮಾ.೯; ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಶೀಘ್ರದಲ್ಲೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು, ಚುನಾವಣೆ ಘೋಷಣೆಯಾದ ತಕ್ಷಣದಿಂದಲೇ ನೀತಿಸಂಹಿತೆ ಜಾರಿಗೆ ಬರುತ್ತದೆ.  ಹೀಗಾಗಿ ಚುನಾವಣೆಗಾಗಿ ಕೈಗೊಳ್ಳಲಾಗುವ ಎಲ್ಲ ಕಾರ್ಯಗಳ ಸಿದ್ಧತೆಗಳನ್ನು ಖುದ್ದಾಗಿ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಹಶೀಲ್ದಾರರಿಗೆ ಸೂಚನೆ ನೀಡಿದರು.ಲೋಕಸಭೆ ಚುನಾವಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಹಸಿಲ್ದಾರರೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಲೋಕಸಭೆ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಶೀಘ್ರದಲ್ಲಿಯೇ ವೇಳಾಪಟ್ಟಿ ಪ್ರಕಟಿಸಲಿದ್ದು, ಚುನಾವಣೆ ಘೋಷಣೆಯಾದ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರುತ್ತದೆ.  ಹೀಗಾಗಿ ಎಲ್ಲ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳಬೇಕು.  ಲೋಕಸಭೆ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ತಹಸಿಲ್ದಾರರ ಪಾತ್ರ ಅತಿ ಮುಖ್ಯವಾಗಿದೆ.   ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ಕುರಿತಂತೆಯೂ ತಹಸಿಲ್ದಾರರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದರು.ಚುನಾವಣೆಗೆ ನೀತಿ ಸಂಹಿತೆ ಜಾರಿಯಾದ ಕೂಡಲೆ 24 ಗಂಟೆಗಳ ಒಳಗಾಗಿ ಎಲ್ಲ ಫ್ಲೆಕ್ಸ್‍ಗಳು, ಗೋಡೆ ಬರಹಗಳು, ಸರ್ಕಾರಿ ಜಾಹೀರಾತುಗಳನ್ನು ತೆರವುಗೊಳಿಸಬೇಕಾಗುತ್ತದೆ.  ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪೌರಾಯುಕ್ತರೊಂದಿಗೆ ಸಮನ್ವಯ ಮಾಡಿಕೊಂಡು, ತೆರವುಗೊಳಿಸುವುದನ್ನು ಖಚಿತ ಪಡಿಸಿಕೊಳ್ಳಬೇಕಾಗುತ್ತದೆ ಎಂದು ಸೂಚನೆ ನೀಡಿದರು.ಚುನಾವಣೆಗಾಗಿ ಈಗಾಗಲೆ ನಿಗದಿಪಡಿಸಲಾಗಿರುವ ಮತಗಟ್ಟೆಗಳಿಗೆ ಖುದ್ದು ತಹಸಿಲ್ದಾರರು ಭೇಟಿ ನೀಡಿ, ವಿಕಲಚೇತನರಿಗಾಗಿ ರ್ಯಾಂಪ್ ವ್ಯವಸ್ಥೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು, ಇಲ್ಲದಿದ್ದಲ್ಲಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ, ಸಿದ್ಧಪಡಿಸಬೇಕು.  ಅದೇ ರೀತಿ ಮತಗಟ್ಟೆಗಳಿಗೆ ಶೌಚಾಲಯ, ವಿದ್ಯುತ್ ಸಂಪರ್ಕ ಸೇರಿದಂತೆ ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಬೇಕು, ಹಾಗೂ ಈ ಕುರಿತು ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿನ ಮತಗಟ್ಟೆಗಳ ವ್ಯಾಪ್ತಿಯಲ್ಲಿ ನೆಟ್‍ವರ್ಕ್ ತೊಂದರೆ ಇರುವುದನ್ನು ಗಮನಿಸಲಾಗಿದ್ದು, ಈ ಕುರಿತು ಎಲ್ಲ ಟೆಲಿಕಾಂ ಕಂಪನಿಗಳ ಪ್ರತಿನಿಧಿಗಳೊಂದಿಗೆ ಇತ್ತೀಚೆಗೆ ಸಭೆ ನಡೆಸಿ, ನೆಟ್‍ವರ್ಕ್ ವ್ಯವಸ್ಥೆ ಸಮರ್ಪಕವಾಗಿ ಒದಗಿಸಲು ಸೂಚನೆ ನೀಡಲಾಗಿತ್ತು.  ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ತಾಲ್ಲೂಕುಗಳಲ್ಲಿನ ಕೆಲವು ಮತಗಟ್ಟೆಗಳ ವ್ಯಾಪ್ತಿಯಲ್ಲಿ ನೆಟ್‍ವರ್ಕ್ ತೊಂದರೆ ಇದೆ, ಇದರಿಂದಾಗಿ ಚುನಾವಣಾ ಕಾರ್ಯಕ್ಕೆ ತೊಂದರೆ ಉಂಟಾಗಲಿದ್ದು, ಕೂಡಲೆ ತಹಸಿಲ್ದಾರರು ಟೆಲಿಕಾಂ ಕಂಪನಿಗಳೊಂದಿಗೆ ಸಮನ್ವಯ ಮಾಡಿಕೊಂಡು, ನೆಟ್‍ವರ್ಕ್ ಸಮರ್ಪಕಗೊಳಿಸಿದ್ದಾರೆಯೇ ಎಂಬುದನ್ನು ಪರಿಶೀಲಿಸಿ, ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.