
ಹುಳಿಯಾರು, ಜು. ೨೯- ಧಾರ್ಮಿಕ ಶ್ರದ್ದಾ ಕೇಂದ್ರಗಳು ನೆಮ್ಮದಿ ನೀಡುವ ಕೇಂದ್ರಗಳಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಪ್ರೇಮಾನಂದ ಎಲ್. ಬಿ. ಹೇಳಿದರು.
ಹುಳಿಯಾರು ಹೋಬಳಿ ಕೊರಗೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಪ್ಪಾರಹಳ್ಳಿ ಶ್ರೀ ಕರಿಯಮ್ಮ ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ೧,೫೦,೦೦೦ ಡಿಡಿಯನ್ನು ವಿತರಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಧಾರ್ಮಿಕ ಮನೋಭಾವ ಕಡಿಮೆಯಾಗುತ್ತಿದೆ. ಇಂತಹ ಧಾರ್ಮಿಕ ಶ್ರದ್ದಾ ಕೇಂದ್ರಗಳಿಂದ ಜನರಲ್ಲಿ ಧರ್ಮಜಾಗೃತಿ ಮೂಡುವಂತಾಗಬೇಕು. ಭಾರತೀಯ ಸಂಸ್ಕೃತಿ, ಸಂಸ್ಕಾರ ಉಳಿಸುವ ಕೆಲಸ ಆಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ರಂಗಧಾಮಯ್ಯ, ಕಾರ್ಯದರ್ಶಿ ಚಂದ್ರಪ್ಪ, ಮೇಲ್ವಿಚಾರಕಿ ರೇಷ್ಮಾ, ಸೇವಾ ಪ್ರತಿನಿಧಿ ಜಗದೀಶ್, ದೇವಸ್ಥಾನದ ಪದಾಧಿಕಾರಿಗಳು, ಸ್ವ ಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.