ಜನರಿಗೆಆರೋಗ್ಯ ಸೇವೆ ತಲುಪಿಸಲು ಶ್ರಮಿಸಿ: ಸದಾಶಿವ ಪ್ರಭು ಬಿ.


ಸಂಜೆವಾಣಿ ವಾರ್ತೆ
ಹೊಸಪೇಟೆ ಜ.10: ಜನರಿಗೆ ಆರೋಗ್ಯ ಸೇವೆಗಳನ್ನು ತಲುಪಿಸಲು ಆರೋಗ್ಯ ಇಲಾಖೆಯು ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವಪ್ರಭು ಬಿ. ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಿಂದ ಜನವರಿ 09ರಂದು ನಗರದ 60 ಹಾಸಿಗೆ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಹಾಗೂ ಕಿರುಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಸೇವೆಗಳನ್ನು ಸಮರ್ಪಕವಾಗಿ ತಲುಪಿಸಬೇಕು ಸರ್ಕಾರದ ಯೋಜನೆಗಳು ಕಟ್ಟಕಡೆಯ ಜನರಿಗೂಸಿಗುವಂತಾಗಬೇಕು ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಎಲ್.ಆರ್.ಶಂಕರ್ ನಾಯ್ಕ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳು ದೊರೆಯದಿರುವಂತಹ ಗ್ರಾಮಗಳನ್ನು ಗುರುತಿಸಿ, ಅಲ್ಲಿಯ ಜನರ ಆರೋಗ್ಯ ಮಟ್ಟವನ್ನು ಸುಧಾರಿಸಲು ಆರೋಗ್ಯ ಮತ್ತು ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಿದೆ. ಈ ಕೇಂದ್ರಗಳಲ್ಲಿ ತಾಯಿ ಆರೋಗ್ಯ, ಗರ್ಭಿಣಿ ಹಾಗೂ ಬಾಣಂತಿ ಸೇವೆಗಳು, ನವಜಾತಾ ಶಿಶುಗಳ ಆರೈಕೆ ಸೇವೆಗಳು, ಮಕ್ಕಳು ಮತ್ತು ಹದಿಹರೆಯದವರ ಆರೋಗ್ಯ ಸೇವೆಗಳು, ಕುಟುಂಬ ಕಲ್ಯಾಣ ಯೋಜನೆ ಸೇರಿದಂತೆ ಒಟ್ಟು 12 ಸೇವೆಗಳನ್ನು ಜನರಿಗೆ ಉಚಿತವಾಗಿ ನೀಡಲಾಗುತ್ತಿದೆ. ಜಿಲ್ಲೆಯ ವಿವಿಧ ತಾಲೂಕುಗಳ ಒಟ್ಟು 13 ಗ್ರಾಮಗಳಲ್ಲಿ ಕಿರು ಚಿತ್ರಪ್ರದರ್ಶನವನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖನಾಯ್ಕ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ ದೊಡ್ಡಮನಿ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಭಾಸ್ಕರ್ ಸೇರಿದಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.