ಜನರ ಪ್ರಾಣ ರಕ್ಷಣೆಗೆ ಸರ್ಕಾರ ಬದ್ಧ

ದಾವಣಗೆರೆ,ಮೇ.13: ಕೋವಿಡ್‌ನಿಂದ ಜನರ ಪ್ರಾಣ ರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ನಡೆದ ಕೋವಿಡ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಆಕ್ಸಿಜನ್ ಕೊರತೆಯ ಬಗ್ಗೆ ನನ್ನ ಗಮನಕ್ಕೆ ಬಂದಿದ್ದು, ಸಿಎಂ ಯಡಿಯೂರಪ್ಪನವರ ಜೊತೆಗೆ ಚರ್ಚಿಸಿ ಕೊರತೆ ನೀಗಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿರುವ ವೈದ್ಯರ, ದಾದಿಯರ ಕೊರತೆ ನೀಗಿಸಲು 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸÀಲಾಗಿತ್ತು. 15 ಜನರಿಗೆ ಈಗಾಗಲೇ ನೇಮಕಾತಿ ಆದೇಶ ನೀಡಿದ್ದು, ಉಳಿದ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಶೇ.50 ರಷ್ಟು ಹಾಸಿಗೆ ಮೀಸಲಿಡಬೇಕು. ಕೋವಿಡ್ ರೋಗಿಗಳಿಂದ ಹೆಚ್ಚು ದರ ವಸೂಲಿ ಮಾಡಿರುವ ಪ್ರಕರಣದ ಬಗ್ಗೆ ಸಂಪೂರ್ಣ ವಿವರ ನೀಡಿದರೆ. ಆ ಆಸ್ಪತ್ರೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಜಿಲ್ಲೆಯಲ್ಲಿ ಐಸಿಯು, ಆಕ್ಸಿಜನ್, ವೆಂಟಿಲೇಟರ್ ಬೆಡ್‌ಗಳ ಕೊರತೆ ಇರುವುದನ್ನು ಒಪ್ಪಿಕೊಳ್ಳುತ್ತೇನೆ. ಇವುಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಆದರೆ, ನಾರ್ಮಲ್ ಬೆಡ್‌ಗಳ ಕೊರತೆ ಇಲ್ಲ. ಜಿಲ್ಲೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ಲಭ್ಯ ಇರುವ ಮಾಹಿತಿಯನ್ನು ಡಿಸಪ್ಲೇ ಮಾಡಲಾಗುವುದು ಎಂದು ಹೇಳಿದರು.