ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹರಿಸಿ; ಜಿಲ್ಲಾಧಿಕಾರಿ ಸ್ನೇಹಲ್ ಆರ್

ಯಾದಗಿರಿ; ಜು, 27;ಕಚೇರಿಗೆ ಸಮಸ್ಯೆಗಳನ್ನು ಹೊತ್ತುಕೊಂಡು ಬರುವ ಗ್ರಾಮೀಣಭಾಗದ ಜನರಿಗೆ ತಕ್ಷಣಕ್ಕೆ ಸ್ಪಂದಿಸಿ ಸಮಸ್ಯೆ ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮದ ಮುಂದುವರೆದ ಭಾಗವಾಗಿ ಮಂಗಳವಾರ ಗುರುಮಿಠಕಲ್ ತಾಲೂಕಿಗೆ ಭೇಟಿ ನೀಡಿ ಪರಿಶೀಲಿಸಿ, ಪುರಸಭೆ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಜನರು ತಮ್ಮ ಕೆಲಸಗಳಿಗಾಗಿ ತಾಲೂಕಾ ಕೇಂದ್ರಕ್ಕೆ ಅಲೆಯುವುದನ್ನು ತಪ್ಪಿಸಲು ತಮಗೆ ನಿಗದಿಪಡಿಸಿದ ಹೋಬಳಿಯಲ್ಲಿಯೇ ಕಾರ್ಯ ನಿರತವಹಿಸುವಂತೆ ಗ್ರಾಮಲೆಕ್ಕಿಗರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ರೈತಸಂಪರ್ಕ ಕೇಂದ್ರದಲ್ಲಿ ರಸಗೊಬ್ಬರದ ಕೊರತೆಯಾಗದಂತೆ ಅಗತ್ಯ ಕ್ರಮಕೈಗೊಂಡು ರೈತರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳುವಂತೆ ಕಟ್ಟುನಿಟ್ಟಾಗಿ ಸೂಚಿಸಿದರು.

ಪಟ್ಟಣದ ಸರಕಾರಿ ಆಸ್ಪತ್ರಗೆ ಭೇಟಿ ನೀಡಿ ಪರಿಶೀಲಿಸಿ ಸಾರ್ವಜನಿಕರ ಬೇಡಿಕೆಯಂತೆ ಶೀಘ್ರವೇ ಆಂಬ್ಯುಲೆನ್ಸ ವ್ಯವಸ್ಥೆಗೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಹರಿಜನವಾಡಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಕೆಲಕಾಲ ಮಕ್ಕಳೊಂದಿಗೆ ಕುಳಿತು ಸಮಾಲೋಚಿಸಿ ಮಕ್ಕಳ ಕಲಿಕಾಮಟ್ಟ ಪರಿಶೀಲಿಸಿದರು.

ಈ ವೇಳೆ ತಹಸೀಲ್ದಾರ ಶರಣಬಸವ, ತಾಲೂಕಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎಸ್.ಎಸ್ ಖಾದ್ರೋಳಿ,ಗ್ರೇಡ್ 2 ತಹಸೀಲ್ದಾರ ನರಸಿಂಹಸ್ವಾಮಿ,ಪುರಸಭೆ ಮುಖ್ಯಾಧಿಕಾರಿ ಶ್ರೀಮತಿ ಭಾರತಿ,ರೈತ ಸಂಪರ್ಕಾಧಿಕಾರಿ ಮಲ್ಲಿಕಾರ್ಜುನ ವಾರದ್, ಸೇರಿದಂತೆ ಇನ್ನಿತರ ಸಿಬ್ಬಂದಿ ಇದ್ದರು.