
ಬೀದರ್:ಸೆ.8: ಜನರು ಸಮಸ್ಯೆಗಳನ್ನು ಹೇಳಿಕೊಂಡು ಬಂದರೆ ಅದಕ್ಕೆ ಸ್ಪಂದಿಸಿ ಪರಿಹಾರ ಒದಗಿಸುವುದು ಮೊದಲ ಆದ್ಯತೆಯಾಗಬೇಕು’ ಎಂದು ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ ಇಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಕೆಆರ್‍ಡಿಬಿ) ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸತತ ಮಳೆ ಸುರಿಯುತ್ತಿರುವುದರಿಂದ ಸರ್ಕಾರಿ ಶಾಲೆ, ಆಸ್ಪತ್ರೆಗಳ ಕಟ್ಟಡ ಸೋರಿಕೆಯಾಗುತ್ತಿದ್ದರೆ ಕೂಡಲೇ ದುರಸ್ತಿಗೊಳಿಸಬೇಕು. ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ ಎಂದರು.
ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ, ಶುದ್ಧ ಕುಡಿಯುವ ನೀರು, ಹೊಸ ಕಟ್ಟಡಗಳ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್ ನಿರ್ಮಿಸಲು ಹೆಚ್ಚಿನ ಒತ್ತು ಕೊಡಲಾಗುವುದು. ರೈತ ಸಂಪರ್ಕ ಕೇಂದ್ರದ ಕಟ್ಟಡಗಳು ಸುಸ್ಥಿತಿಯಲ್ಲಿ ಇರಬೇಕು. ಯಾವುದಾದರೂ ಕೇಂದ್ರಗಳು ಸೋರುತ್ತಿದ್ದರೆ ಸರಿಪಡಿಸಬೇಕು. ರೈತರಿಗೆ ಬೀಜ, ರಸಗೊಬ್ಬರ, ಸಲಕರಣೆ ವಿತರಣೆಯಲ್ಲಿ ತೊಂದರೆ ಉಂಟಾಗಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿ ಶೌಚಾಲಯ ವ್ಯವಸ್ಥೆ ಸರಿಪಡಿಸಬೇಕು. ಎಲ್ಲಾ ರೀತಿಯ ಚಿಕಿತ್ಸೆ ಕಲ್ಪಿಸಬೇಕೆಂದು ಸೂಚಿಸಿದರು.
ಕೆಕೆಆರ್‍ಡಿಬಿ ಅನುದಾನದಿಂದ ಅಗತ್ಯ ಸೌಕರ್ಯ ಕಲ್ಪಿಸಲಾಗುವುದು. ಯಾವುದಾದರೂ ಸೌಕರ್ಯಗಳ ಅಗತ್ಯವಿದ್ದಲ್ಲಿ ಮಾಹಿತಿ ನೀಡಬೇಕೆಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣಕುಮಾರ ಪಾಟೀಲ, ಚಿಟ್ಟಗುಪ್ಪ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಕ್ರಂ ಪಾಶಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.