ಜನಸಂಖ್ಯಾ ಸ್ಫೋಟ ತಡೆಗೆ ಮುನಿಸ್ವಾಮಿ ಕರೆ

ಕೋಲಾರ, ಜು.೧೨: ಇತ್ತೀಚಿನ ದಿನಗಳಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಪಂಚದಲ್ಲಿ ಅತಿ ಹೆಚ್ಚು ಜನಸಂಖ್ಯೆಯುಳ್ಳ ದೇಶಗಳ ಪಟ್ಟಿಯಲ್ಲಿ ಭಾರತ ದೇಶವು ೨ನೇ ಸ್ಥಾನದಲ್ಲಿದೆ. ಇದರಿಂದ ದೇಶದ ಅಭಿವೃದ್ಧಿಯ ಮೇಲೆ ಅನೇಕ ದುಷ್ಟರಿಣಾಮಗಳು ಉಂಟಾಗುತ್ತಿವೆ. ಆದ್ದರಿಂದ ಜನಸಂಖ್ಯಾ ಸ್ಫೋಟವಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು.
ಸರ್ಕಾರಿ ಮಹಿಳಾ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ, ವಿಶ್ವ ಜನಸಂಖ್ಯಾ ದಿನಾಚರಣೆ/ಅಭಿಯಾನ ೨೦೨೨ ರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಜನಸಂಖ್ಯೆ ೧೩೫ ಕೋಟಿಯಾಗಿದೆ. ೧೯೩೦ರಲ್ಲಿ ಮೈಸೂರು ಮಹಾರಾಜರಿಂದ ಈ ಜನಸಂಖ್ಯೆ ಸ್ಫೋಟವನ್ನು ತಡೆಗಟ್ಟಲು ಪಣತೊಟ್ಟರು. ಪ್ರತಿ ಮನೆಗೆ ಹೋಗಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಜನಸಂಖ್ಯಾ ಸ್ಪೋಟದ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಶ್ರೀನಿವಾಸಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಚೆನ್ನಾಗಿ ಓದಿ ಪೋಷಕರ ಆಸೆಗಳನ್ನು ಇಡೇರಿಸುವಂತಹ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಮಾತನಾಡಿ, ಜನಸಂಖ್ಯಾ ಸ್ಪೋಟದ ಬಗ್ಗೆ ಪ್ರತಿಯೊಬ್ಬರು ಜಾಗೃತರಾಗಬೇಕು. ವಿದ್ಯಾರ್ಥಿಗಳು ಪ್ರತಿದಿನ ಪತ್ರಿಕೆಗಳನ್ನು ಓದಿ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ದೇಶದ ಭವಿಷ್ಯ ನಮ್ಮ ಕೈಯಲ್ಲಿದೆ. ಅದನ್ನು ಕಾಪಾಡುವ ಜವಾಬ್ದಾರಿ ನಮ್ಮದು. ಜನಸಂಖ್ಯಾ ನಿಯಂತ್ರಣದಿಂದ ಸರ್ಕಾರ ಸೌಲಭ್ಯ ಒದಗಿಸಲು ಸುಲಭವಾಗುತ್ತದೆ. ಗುರಿಯೊಂದನ್ನು ಇಟ್ಟುಕೊಂಡು ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮಾಡಿ ಈ ಸ್ಫರ್ಧಾತ್ಮಕ ಯುಗದಲ್ಲಿ ಉತ್ತಮ ಪ್ರಜೆಯಾಗುವಂತಹ ಕೆಲಸಗಳನ್ನು ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಜಗದೀಶ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ|| ವಿಜಯ್‌ಕುಮಾರ್, ಜಿಲ್ಲಾ ಅಂಧತ್ವಾಧಿಕಾರಿಗಳಾದ ಡಾ|| ನಾರಾಯಣಸ್ವಾಮಿ, ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಗಂಗಾಧರ್ ರಾವ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಪ್ರೇಮ ಸೇರಿದಂತೆ ಉಪಸ್ಥಿತರಿದ್ದರು.