
ಸಂಜೆವಾಣಿ ವಾರ್ತೆ
ದಾವಣಗೆರೆ; ಜುಲೈ.12: ಜನಸಂಖ್ಯೆ ಹೆಚ್ಚಳದಿಂದ ಸಮಾಜದ ಆರೋಗ್ಯ, ಜನರ ಮೂಲ ಸೌಕರ್ಯಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಕುವೆಂಪು ಭವನದಲ್ಲಿ ಜರುಗಿದ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಜುಲೈ.11 ರಂದು ಪ್ರತಿ ವರ್ಷವು ವಿಶ್ವ ಜನಸಂಖ್ಯಾ ದಿನವನ್ನಾಗಿ ಆಚರಿಸಲಾಗುತ್ತದೆ. ಪ್ರಪಂಚದ ಜನಸಂಖ್ಯೆಯಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಿ ಮೊದಲನೇ ಸ್ಥಾನದಲ್ಲಿದೆ. 1947ರಲ್ಲಿ ಶಿಶು ಮರಣ, ತಾಯಿ ಮರಣ, ಜನ ಸಾಮಾನ್ಯರ ಸಾವಿನ ಪ್ರಮಾಣ ಹೆಚ್ಚಾಗಿತ್ತು. ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಸೌಲಭ್ಯಗಳಿಂದ ಜನರು ಆರೋಗ್ಯದಲ್ಲಿ ಸುಧಾರಣೆಯಾಗಿ ಮರಣ ಪ್ರಮಾಣ ಗಣನೀಯ ಪ್ರಮಾಣದಲ್ಲಿ ತಗ್ಗಿದೆ ಎಂದರು.