ಜನಸ್ನೇಹಿ ಪೊಲೀಸ್ ಸೇವೆ: ಎಸ್ಪಿ

ತುಮಕೂರು, ಮಾ. ೩೦- ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸದಾಕಾಲ ಮುಕ್ತವಾಗಿದ್ದು, ಮುಂಬರುವ ದಿನಗಳಲ್ಲಿ ಜನಸಾಮಾನ್ಯರಿಗೆ ಮತ್ತಷ್ಟು ಹತ್ತಿರವಾಗುವ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ ಹೇಳಿದರು.
ನಗರದಲ್ಲಿ ಜಿಲ್ಲಾ ಪೊಲೀಸ್ ನಗರ ಉಪ ವಿಭಾಗದ ವತಿಯಿಂದ ಏರ್ಪಡಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆ ವತಿಯಿಂದ ಸಾರ್ವಜನಿಕರ ಹಿತದೃಷ್ಠಿಯಿಂದ ಸೈಬರ್ ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ತಂತ್ರಾಂಶಗಳನ್ನು ಹೊರ ತರಲಾಗಿದೆ ಎಂದರು.
ಸಾರ್ವಜನಿಕರು ಟ್ರಾಫಿಕ್ ಸಮಸ್ಯೆ, ಸೈಬರ್ ಕ್ರೈಂ, ಸರಗಳ್ಳತನ, ಮಾದಕ ವಸ್ತುಗಳ ಮಾರಾಟ ಹಾಗೂ ಇನ್ನೂ ಅನೇಕ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ತಿಳಿಸುತ್ತಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್ಪಿ ವಂಶಿಕೃಷ್ಣ ಅವರು, ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಜನಸ್ನೇಹಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಜಿಲ್ಲಾ ಪೊಲೀಸ್ ಸಿಬ್ಬಂದಿಗಳು ತಮ್ಮ ಸೇವೆಗೆ ಸಿದ್ಧರಿರುತ್ತಾರೆ. ತಮ್ಮಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು ಅನೇಕ ಯೋಜನೆಗಳನ್ನು ರೂಪಿಸಿದ್ದು, ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಎಲ್.ಹೆಚ್.ಎಂ.ಎಸ್. (ಲಾಕ್ಡ್ ಹೌಸ್ ಮಾನಿಟರಿಂಗ್ ಸಿಸ್ಟಂ), ಇ.ಆರ್.ಎಂ.ಎಸ್. (ಎಮರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಂ), ಈ-ಲಾಸ್ಟ್ ಆಪ್ ಸೇರಿದಂತೆ ಅನೇಕ ಸೌಲಭ್ಯಗಳನ್ನು ಹೊರತಂದಿದ್ದು, ಇವುಗಳನ್ನು ಸದುಪಯೋಗಪಡಿಸಿಕೊಂಡು ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ನೂತನ ಬೀಟ್ ವ್ಯವಸ್ಥೆಯ ಲಾಂಛನವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಅಡಿಷನಲ್ ಎಸ್ಪಿ ಉದೇಶ್, ಡಿವೈಎಸ್ಪಿ ಶ್ರೀನಿವಾಸ್, ವಿವಿಧ ಠಾಣೆಯ ವೃತ್ತ ನಿರೀಕ್ಷಕರು, ಉಪನಿರೀಕ್ಷಕರು, ಸಂಚಾರಿ ಪೊಲೀಸರು, ಪಾಲಿಕೆ ಸದಸ್ಯರುಗಳು, ನಗರದ ಹಲವು ಬಡಾವಣೆಗಳ ಮುಖಂಡರುಗಳು, ಸಮಾಜ ಸೇವಕರು, ಸಾರ್ವಜನಿಕರು ಭಾಗವಹಿಸಿದ್ದರು.