ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನಕ್ಕೆ ಫಾರೂಕ್ ಆಗ್ರಹ

ಶ್ರೀನಗರ, ಮಾ.೧೨- ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರಳಿ ನೀಡಬೇಕು ಮತ್ತು ಸಾರ್ವತ್ರಿಕ ಚುನಾವಣೆಗಳನ್ನು ನಡೆಸಬೇಕೆಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಆಗ್ರಹಿಸಿದ್ದಾರೆ.

ಕಾಶ್ಮೀರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಣಿವೆ ರಾಜ್ಯವನ್ನು ಇಬ್ಭಾಗಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವುದು ದುರಂತ. ಸುಂದರ ರಾಜ್ಯವೊಂದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾರ್ಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರ ರಾಷ್ಟ್ರದ ಇತಿಹಾಸದಲ್ಲಿ ಇದೇ ಮೊದಲು ಎಂದು ಟೀಕಿಸಿದರು.

ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ಅದರ ರಾಜ್ಯ ಸ್ಥಾನಮಾನ ಮರುಸ್ಥಾಪಿಸಬೇಕು.ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಏಕೆ ಚುನಾವಣೆಗಳನ್ನು ನಡೆಸುತ್ತಿಲ್ಲ?. ಇದು ತುಂಬಾ ವಿಚಿತ್ರವಾಗಿದೆ. ಇಲ್ಲಿನ ಜನರು ಇದೇ ರಾಷ್ಟ್ರಕ್ಕೆ ಸೇರಿದವರು. ಹೀಗಾಗಿ ಈ ಹಿಂದಿನ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಭಾರತವು ಪ್ರಜಾಪ್ರಭುತ್ವ ರಾಷ್ಟ್ರ. ಸಂವಿಧಾನದ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಆದರೆ ಇಲ್ಲಿ ಅವುಗಳ ಜಾರಿ ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.

ಚುನಾವಣೆ ನಡೆಸಲು ಮತ್ತು ರಾಜ್ಯ ಸ್ಥಾನಮಾನವನ್ನು ಮರಳಿ ನೀಡಬೇಕು ಎಂದು ಒತ್ತಾಯಿಸಿ ಕೇಂದ್ರ ಸರ್ಕಾರದ ಬಳಿ ನಿಯೋಗ ಕೊಂಡಯ್ಯಲಾಗುವುದು. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಯಕರನ್ನು ಭೇಟಿ ಮಾಡಲಾಗುವುದು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ನಮ್ಮ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ಫಾರೂಕ್ ತಿಳಿಸಿದರು.