ಜಲಜೀವನ ಮಿಷನ್ ಯೋಜನೆಯಲ್ಲಿ ಅಕ್ರಮ ತಡೆಯಲು ಕೆ.ಆರ್.ಎಸ್. ಪಕ್ಷ ಆಗ್ರಹ

ವಿಜಯಪುರ,ಜ.18:2022-23ನೇ ಸಾಲಿನ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಅಕ್ರಮ ನಡೆಯುವುದನ್ನು ತಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರಿಗೆ ಮನವಿ ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಅವರು ಮಾತನಾಡಿ, 2022-23ನೇ ಸಾಲಿನ ಜಲಜೀವನ್ ಮಿಷನ್ ಯೋಜನೆಯ ಅಡಿಯಲ್ಲಿ ಸರ್ಕಾರ ಪ್ರತಿಮನೆಗೆ ಶುದ್ಧ ಕುಡಿಯುವ ನೀರಿನ್ನು ಒದಗಿಸುವ ಉತ್ತಮ ಯೋಜನೆಯನ್ನು ಹಮ್ಮಿಕೊಂಡಿದೆ. ಆದರೆ ಸರ್ಕಾರಿ ಅಧಿಕಾರಿಗಳ ಮತ್ತು ಶಾಸಕರ ದಿವ್ಯ ನಿರ್ಲಕ್ಷದಿಂದಾಗಿ ಈಗಾಗಲೇ ಕೆಲವೊಂದು ಹಳ್ಳಿಗಳಲ್ಲಿ ಕಾಮಗಾರಿ ಪ್ರಾರಂಭವಾಗಿದೆ. ಇನ್ನು ಕೆಲವೊಂದು ಹಳ್ಳಿಗಳಲ್ಲಿ ಚಾಲನೆಗೊಳ್ಳುತ್ತಿದೆ. ಈ ಯೋಜನೆ ಅತ್ಯಂತ ಕಳಪೆ ಮಟ್ಟದಲ್ಲಿ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಆಗಿರುವ ಜೆಜೆಎಂ (ಜಲಜೀವನ್ ಮಷಿನ್) ದೇಶದ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ಪ್ರಜೆಗೂ ಶುದ್ಧ ಕುಡಿವ ನೀರನ್ನು ಒದಗಿಸುವ ಮಹತ್ತರವಾದ ಯೋಜನೆಯನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ. 2024ರ ಹೊತ್ತಿಗೆ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ. ಆದರೆ ಇಂದು ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಈ ಹಿಂದಿನ ವರ್ಷದಲ್ಲಿ ಕಳಪೆ ಗುಣಮಟ್ಟದ ಕಾಮಗಾರಿಯಿಂದಾಗಿ ಶೇ. 90ರಷ್ಟು ಈ ಯೋಜನೆ ದುರುಪಯೋಗಕ್ಕೆ ಒಳಗಾಗಿದೆ. ವ್ಯಾಪಕವಾದ ಭೃಷ್ಟಾಚಾರದಿಂದ ಕೂಡಿದೆ. ಈ ಯೋಜನೆಗಳು ಕೇವಲ ದಾಖಲೆಗಳಿಗೆ ಸೀಮಿತವಾಗದೆ ಕಾರ್ಯರೂಪಕ್ಕೆ ಬರಲಿ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಆಗ್ರಹಿಸಿದೆ.

ಈ ಸಂದರ್ಭದಲ್ಲಿ ರಾಕೇಶ ಇಂಗಳಗಿ, ಹಮೀದ್ ಇನಾಮದಾರ, ಪ್ರವೀಣ ಕನಸೆ ಮತ್ತಿತರರು ಇದ್ದರು.