
ಸಂಜೆವಾಣಿ ವಾರ್ತೆ
ಶಿವಮೊಗ್ಗ, ಸೆ. ೨೦: ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾದ ಕಾಲುಬಾಯಿ ರೋಗವನ್ನು ತಡೆಯಲು ದನ, ಎಮ್ಮೆ ಮತ್ತು ಕರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 4ನೇ ಸುತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಸೆ. 26 ರಿಂದ 25 ರವರೆಗೆ ಉಚಿತವಾಗಿ 4ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು ದನ, ಎಮ್ಮೆ ಮತ್ತು ಕರುಗಳಿಗೆ ಲಸಿಕೆ ನೀಡಲಾಗುವುದು. ರೈತರಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡುವ ಕಾಲುಬಾಯಿ ರೋಗ ನಿಯಂತ್ರಿಸಿ, ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ಈ ರೋಗದ ವಿರುದ್ದ ಲಸಿಕೆ ಹಾಕಿಸುವುದು ಕಡ್ಡಾಯವಾಗಿದ್ದು, ಲಸಿಕೆದಾರರು ನಿಮ್ಮ ಗ್ರಾಮಕ್ಕೆ, ಮನೆ ಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕುವರು. ಯಾರೂ ಕೂಡ ತಮ್ಮ ಎಮ್ಮೆ, ದನ ಕರುಗಳು ಲಸಿಕೆಯಿಂದ ವಂಚಿತರಾಗದಂತೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದ ಅವರು ಜಿಲ್ಲೆಯಲ್ಲಿ ಶೇ.100 ಲಸಿಕಾ ಪ್ರಗತಿ ಸಾಧಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.ಹೊಸನಗರ, ಸೊರಬ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಕೃತಕ ಗರ್ಭಧಾರಣೆ ಪ್ರಗತಿ ಸ್ವಲ್ಪ ಕಡಿಮೆಯಿದ್ದು, ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.ಹೋರಿ ಬೆದರಿಸುವವರು ಮುಂಚಿತವಾಗಿ ಪಶುಪಾಲನ ಇಲಾಖೆಯಿಂದ ಅನುಮತಿ ಪಡೆಯಬೇಕು. ಅಧಿಕಾರಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಪಡೆದು 15 ದಿನ ಮುಂಚಿತವಾಗಿ ಅನುಮತಿ ನೀಡಬೇಕು ಎಂದರು.