ಜಾನುವಾರುಗಳ ಆರೋಗ್ಯ ಸೇವೆಗೆ ೮೨ ಆಂಬುಲೆನ್ಸ್ ಲೋಕಾರ್ಪಣೆ


ಬೆಂಗಳೂರು,ಜು.೨೧: ಬೆಳಗಾವಿ ವಿಭಾಗದ ಜಿಲ್ಲೆಗಳಲ್ಲಿ ಜಾನುವಾರುಗಳ ಸಂರಕ್ಷಣೆ ಮತ್ತು ಆರೋಗ್ಯ ಸೇವೆಗಾಗಿ ೮೨ ಆಂಬುಲೆನ್ಸ್‌ಗಳನ್ನು ಜುಲೈ ೧೯ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಜುಲೈ ೧೯ರಂದು ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಹಿರಿಯ ಸಚಿವರುಗಳು, ಸಂಸದರು, ಸ್ಥಳೀಯ ಶಾಸಕರು ಸಮ್ಮುಖದಲ್ಲಿ ಸುವರ್ಣಸೌಧದ ಆವರಣದಲ್ಲಿ ಸಂಚಾರಿ ಪಶು ಚಿಕಿತ್ಸಾ ವಾಹನಗಳನ್ನು ಲೋಕಾರ್ಪಣೆ ನೇರವೇರಿಸಲಾಗುವುದು ಎಂದು ತಿಳಿಸಿದ್ದಾರೆ.
ರೈತರಿಗೆ, ಜಾನುವಾರು ಸಾಕಾಣಿಕೆದಾರರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಜಾನುವಾರುಗಳ ಸಂರಕ್ಷಣೆ, ಪಾಲನೆ ಮತ್ತು ಆರೋಗ್ಯ ರಕ್ಷಣೆಗಾಗಿ ಸುಸಜ್ಜಿತ ಶಸ್ತ್ರ ಚಿಕಿತ್ಸಾ ವಾಹನಗಳ ಮೂಲಕ ಪಶು ಸಂಜೀವಿನಿ ಯೋಜನೆ ಜಾರಿಗೆ ತರಲಾಗಿತ್ತು. ಇದರ ಮುಂದುವರೆದ ಭಾಗವೇ ಸಂಚಾರಿ ಪಶು ಚಿಕಿತ್ಸಾ ವಾಹನವಾಗಿದೆ ಎಂದು ಪ್ರಭು ಚವ್ಹಾಣ್ ವಿವರಿಸಿದ್ದಾರೆ.
ರಾಜ್ಯದಲ್ಲಿ ದನ, ಎಮ್ಮೆ, ಕುರಿ, ಮೇಕೆ ಮತ್ತು ಹಂದಿ ಸೇರಿದಂತೆ ೨೯೦ ಲಕ್ಷ ಜಾನುವಾರುಗಳಿದ್ದು, ಪ್ರತಿ ಒಂದು ಲಕ್ಷ ಜಾನುವಾರುಗಳಿಗೆ ಒಂದು ಸಂಚಾರಿ ಚಿಕಿತ್ಸಾ ವಾಹನವನ್ನು ಕೇಂದ್ರ ಸರ್ಕಾರದಿಂದ ಒದಗಿಸಲಾಗುತ್ತಿದೆ ಎಂದು ಸಚಿವ ಪ್ರಭು ಚವ್ಹಾಣ್ ವಿವರಿಸಿದ್ದಾರೆ.
ಪ್ರಧಾನಿ ನರೇಂದ್ರಮೋದಿ ಅವರ ಕನಸಿನ ಯೋಜನೆಯಾಗಿದೆ. ೨೭೫ ಪಶು ಸಂಚಾರಿ ಚಿಕಿತ್ಸಾ ವಾಹನಗಳು ಕೇಂದ್ರ ಸರ್ಕಾರದ ಜನಪರ ಯೋಜನೆಯದ್ದಾಗಿದೆ. ಆಂಬುಲೆನ್ಸ್‌ಗಳನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ (೬೦:೪೦) ಅನುಪಾತದಲ್ಲಿ ನಿರ್ವಹಣೆ ಮಾಡಲಾಗುತ್ತಿದೆ. ಇಂತಹ ಜನಪರ ಯೋಜನೆ ಅನುಷ್ಠಾನಕ್ಕೆ ಸಹಕರಿಸಿದ ಪ್ರಧಾನಿ ನರೇಂದ್ರಮೋದಿ, ಕೇಂದ್ರ ಪಶು ಸಂಗೋಪನೆ ಸಚಿವ ಪುರುಷೋತ್ತಮ್ ರೂಪಾಲ್ ಜೀ ಅವರಿಗೆ ಅಭಿನಂದನೆ ಸಲ್ಲಿಸಿರುವ ಸಚಿವ ಪ್ರಭು ಚವ್ಹಾಣ್ ಅವರು, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಗೋಸಂರಕ್ಷಣೆ ಮಾಡಲಾಗುತ್ತಿದೆ ಎಂದು ಸ್ವಷ್ಟಪಡಿಸಿದ್ದಾರೆ.
ಸಂಚಾರಿ ಪಶು ಚಿಕಿತ್ಸಾ ವಾಹನಗಳ ನಿಗಾ ವ್ಯವಸ್ಥೆಗಾಗಿ ಪ್ರತ್ಯೇಕ ಕಾಲ್ ಸೆಂಟರ್ ಸ್ಥಾಪಿಸಲಾಗಿದ್ದು, ರೈತರಿಂದ ೮೨೭೭೧೦೦೨೦೦ ಅಥವಾ ೧೯೬೨ಕ್ಕೆ ಕರೆ ಬಂದ ತಕ್ಷಣ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿ ಚಿಕಿತ್ಸಾ ವಾಹನದಲ್ಲಿ ಪಶು ವೈದ್ಯ, ಪಶು ಸಹಾಯಕ ಮತ್ತು ವಾಹನ ಚಾಲಕ ಕಂ ಡಿ ದರ್ಜೆ ನೌಕಕರು ಕಾರ್ಯನಿರ್ವಹಿಸುತ್ತಾರೆ ಎಂದು ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ನಾನು ಪಶು ಸಂಗೋಪನೆ ಇಲಾಖೆ ಸಚಿವನಾದ ನಂತರದಲ್ಲಿ ರಾಜ್ಯ ಸರ್ಕಾರದ ವತಿಯಿಂದ ೧೫ ಪಶು ಚಿಕಿತ್ಸಾ ವಾಹನಗಳನ್ನು ಪಶು ಸಂಜೀವಿನಿ ಹೆಸರಲ್ಲಿ ಲೋಕಾರ್ಪಣೆ ಮಾಡಿದ್ದು ಗೋಸಂಕುಲಗಳ ಆರೋಗ್ಯ ಸೇವೆಗಾಗಿ ಕಾರ್ಯನಿರ್ವಹಿಸುತ್ತಿವೆ. ಕೇಂದ್ರ ಸರ್ಕಾರವು ಪಶು ಸಂಜೀವಿನಿ ಕಾರ್ಯಕ್ರಮವನ್ನು ಪ್ರಶಂಸಿಸಿ ರಾಜ್ಯಕ್ಕೆ ೨೭೫ ಸಂಚಾರಿ ಪಶು ಚಿಕಿತ್ಸಾ ವಾಹನಗಳನ್ನು ಒದಗಿಸಿದ್ದು, ದೇಶದಲ್ಲಿಯೇ ಮೊದಲಾಗಿದೆ.ಇದರ ಭಾಗವಾಗಿ ಬೆಂಗಳೂರು ವಿಭಾಗದ ೭೦ ಅಂಬ್ಯುಲೆನ್ಸ್ ಅನ್ನು ಮೇ.೭ರಂದು ಲೋಕಾರ್ಪಣೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.