ಜಾನುವಾರು ಜಾತ್ರೆ: ತೊರವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿಜಯಪುರ,ಜ.10:ಜಾನುವಾರು ಜಾತ್ರೆಯ ಹಿನ್ನೆಲೆಯಲ್ಲಿ ನಗರದ ತೊರವಿಗೆ ಮಂಗಳವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು.

ಮೂರು ವರ್ಷಗಳ ನಂತರ ಜಾನುವಾರಗಳ ಜಾತ್ರೆ ನಡೆಯುತ್ತಿರುವುದರಿಂದ ಸುಮಾರು 20-25 ಎಕರೆಯಲ್ಲಿ ಬಹಳ ವಿಜೃಂಭಣೆಯಿಂದ ಜಾತ್ರೆ ಆಯೋಜಿಸಲಾಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು.

ಜಾನುವಾರ ಜಾತ್ರೆಯ ಸಂದರ್ಭ ಯಾವುದೇ ಸಮಸ್ಯೆ ಉಂಟಾಗದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಜಾತ್ರೆಗೆ ಬರಲು ಅನುಕೂಲವಾಗುವ ನಿಟ್ಟಿನಲ್ಲಿ ಸುಗಮ ರಸ್ತೆ ಹಾಗೂ ಬಸ್‍ಗಳ ವ್ಯವಸ್ಥೆ, ಜಾನುವಾರಗಳಿಗೆ ಕುಡಿಯುವ ನೀರು ಒದಗಿಸುವುದು, ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಪಶುವೈದ್ಯರು ಮುಂಜಾಗ್ರತಾ ಕ್ರಮವಾಗಿ ಜಾತ್ರೆಯ ಸಂದರ್ಭದಲ್ಲಿ ಆಂಬ್ಯಲೆನ್ಸ್ ವೈದ್ಯಕೀಯ ಸೌಲಭ್ಯ ಇರುವಂತೆ ನೋಡಿಕೊಳ್ಳಬೇಕು. ಯಾವುದೇ ಕೊರತೆ ಉಂಟಾಗದಂತೆ ಅಚ್ಚುಕಟ್ಟಾಗಿ ಜಾನುವಾರ ಜಾತ್ರೆ ವ್ಯವಸ್ಥಿತವಾಗಿ ಆಯೋಜನೆಗೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ, ವಿಜಯಪುರ ಉಪವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಶೈಲಜಾ. ಎಂ.ವಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.