
ಸಂಜೆವಾಣಿ ವಾರ್ತೆ
ದಾವಣಗೆರೆ. ಜು.೫; ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದಿಂದ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಐದು ದಿನದ “ಉದ್ಯೋಗ ಕೌಶಲ್ಯಗಳು” ಕಾರ್ಯಗಾರದ ಉದ್ಘಾಟನೆಯನ್ನು ವಿಭಾಗದ ಸಭಾಂಗಣದಲ್ಲಿ ನೆರವೇರಿಸಲಾಯಿತು. ಈ ಐದು ದಿನದ ಕಾರ್ಯಾಗಾರವನ್ನು ಪುಣೆ ಮೂಲದ ತರಬೇತಿ ಸಂಸ್ಥೆಯಾದ ರೂಬಿಕಾನ್ ಸ್ಕಿಲ್ ಡೆವಲಪ್ಮೆಂಟ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶೇಕಡವಾರು ಜೊತೆಗೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕು. ಕಾಲೇಜಿನಲ್ಲಿರುವ ಉತ್ತಮ ಸೌಕರ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕೆಂದು ಕರೆಕೊಟ್ಟರು. ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್, ಮುಂಬರುವ ವಿವಿಧ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮತ್ತು ಉದ್ಯೋಗವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಂಬಿಎ ವಿಭಾಗದ ನಿರ್ದೇಶಕರಾದ ಡಾ ಬಕ್ಕಪ್ಪ ಬಿ ಮಾತನಾಡಿ, ಎಂಬಿಎ ವಿಭಾಗದಲ್ಲಿ ನುರಿತ ಅಧ್ಯಾಪಕರುಗಳಿದ್ದು ಎಲ್ಲಾ ರೀತಿಯ ಸೌಕರ್ಯಗಳನ್ನು ಒಳಗೊಂಡಿದೆ. ವಿವಿಧ ತರಬೇತಿ ಕಾರ್ಯಕ್ರಮಗಳು ಮತ್ತು ಹಲವು ಚಟುವಟಿಕೆಗಳು ನಡೆಯಲಿದ್ದು ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕೆಂದು ತಿಳಿಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಅಧಿಕಾರಿ ವೈ ಯು ಸುಭಾಷ್ ಚಂದ್ರ, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ ಬಸವರಾಜು ಪಿ ಎಸ್, ಎಂಬಿಎ ವಿಭಾಗದ ಪ್ಲೇಸ್ಮೆಂಟ್ ಸಂಯೋಜಕರಾದ ಪ್ರೊ ವಿನಯ್ ಐ, ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಸಾಧಿಕ ಬಾನು, ಪ್ಲೇಸ್ಮೆಂಟ್ ಸಂಯೋಜಕರುಗಳಾದ ಆಕಾಶ್ ಮತ್ತು ಅಭಿಷೇಕ್ ಹಾಗೂ ವಿಭಾಗದ ಅಧ್ಯಾಪಕ ವರ್ಗದವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.