ಜಿಟಿಡಿಗೆ ಜೆಡಿಎಸ್ ಬಾಗಿಲು ಶಾಶ್ವತವಾಗಿ ಮುಚ್ಚಿದೆ:ಎಚ್ ಡಿಕೆ

ಮೈಸೂರು, ಡಿ.4- ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಜೆಡಿಎಸ್‌ ಬಾಗಿಲು ಶಾಶ್ವತವಾಗಿ ಮುಚ್ಚಿದೆ ಎಂದು ಮಾಜಿ‌ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಪರ ಮತಯಾಚಿಸಿದರು.
ಬಳಿಕ ಮಾತನಾಡಿದ ಅವರು, ಜಿ.ಟಿ.ದೇವೇಗೌಡ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಎಚ್.ಡಿ.ದೇವೇಗೌಡರು, ನಾನು ಮತ್ತು ಪುತ್ರ ನಿಖಿಲ್‌ ಸಾಕಷ್ಟು ಪ್ರಯತ್ನಿಸಿದೆವು. ಯಾರದ್ದೋ ಕಲ್ಯಾಣಕ್ಕಾಗಿ, ಯಾರನ್ನೋ ಮುಖ್ಯಮಂತ್ರಿ ಮಾಡಲು ಜಿಟಿಡಿ ದೇಗುಲದಲ್ಲಿ ಕಲ್ಯಾಣೋತ್ಸವ ಮಾಡಿಸಿದ್ದಾರೆ. ಆದರೆ ನಾನು ಬಡವರ, ರೈತರ ಕಲ್ಯಾಣಕ್ಕಾಗಿ ಹೋರಾಡುತ್ತೇನೆ ಎಂದು ಹೇಳಿದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಅವರಿಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಸಿದ್ದರಾಮಯ್ಯ ಮಗ ಶಾಸಕರಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಕುಟುಂಬದ ನಾಲ್ವರು ರಾಜಕಾರಣದಲ್ಲಿದ್ದಾರೆ. ಸಿದ್ದರಾಮಯ್ಯ ಮಗ ಅಕಾಲಿಕ ಮರಣಕ್ಕೀಡಾದರು. ಅವರು ಸಹ ಸಕ್ರಿಯ ರಾಜಕಾರಣದಲ್ಲಿದ್ದರು ಎಂದು ಹೇಳಿದರು.
ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಹಲವರು ಈ ರೀತಿ ಇದ್ದಾರೆ. ಬಿಜೆಪಿ ಕಾಂಗ್ರೆಸ್ ಪಕ್ಷದವರು ಇದಕ್ಕೆ ಕಾನೂನು ಜಾರಿ ಮಾಡಲಿ. ತಮ್ಮ ಸಾಮರ್ಥ್ಯದಿಂದ ಸಂವಿಧಾನ ತಿದ್ದುಪಡಿ ಮಾಡಲಿ. ಕುಟುಂಬದ ಎಷ್ಟು ಜನ ರಾಜಕಾರಣಕ್ಕೆ ಬರಬೇಕು ಎಂಬ ನಿಯಮ ಮಾಡಲಿ ಎಂದು ಸವಾಲು ಹಾಕಿದರು.