ಸಂಜೆವಾಣಿ ವಾರ್ತೆ
ಹೊಸಪೇಟೆ ಜೂ1: ಜಿಲ್ಲೆಯಲ್ಲಿ 22 ಗ್ರಾಮಗಳು ನದಿ ಪಾತ್ರದಲ್ಲಿ ಇದ್ದು, ನದಿ ನೀರು ಹೆಚ್ಚಾದಲ್ಲಿ ಮುಳುಗಡೆಯಾಗುವ ಸಂಭವವಿದೆ. ಅಂತಹ ಗ್ರಾಮಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರ್‍ಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ವೆಂಕಟೇಶ್ ಟಿ. ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಹೂವಿನಹಡಗಲಿ ತಾಲ್ಲೂಕಿನಲ್ಲಿ 16 ಗ್ರಾಮಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 22 ಗ್ರಾಮಗಳು ನದಿ ಪಾತ್ರಗಳಲ್ಲಿ ಬರುತ್ತವೆ. ಹೂವಿನಹಡಗಲಿಯ ಕುರುವತ್ತಿ ಹಾಗೂ ಬ್ಯಾಲಹುಣಸಿ ಗ್ರಾಮಗಳಲ್ಲಿ ನದಿ ನೀರು ಹೆಚ್ಚಾದಾಗ ಹಲವು ಮನೆಗಳು ಮುಳುಗಡೆಯಾಗುತ್ತವೆ. ಇದರ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ತಿಳಿಸಿದರು.
ಮುಂಗಾರು ಮಳೆ ಶೀಘ್ರದಲ್ಲಿ ಆರಂಭವಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಸಂಬಂಧಪಟ್ಟ ಇಲಾಖಾ ವ್ಯಾಪ್ತಿಯಲ್ಲಿ ತಾಲ್ಲೂಕು ಮಟ್ಟದಲ್ಲಿ ಪ್ರತೇಕ ಸಹಾಯವಾಣಿ ಆರಂಭಿಸಿ ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಎಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸುರಿದ ಮಳೆಯಿಂದಾಗಿ ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಜಂಟಿ ಸಮೀಕ್ಷೆ ಕೈಗೊಂಡು ಫಲಾನುಭವಿಗಳ ಮಾಹಿತಿಯನ್ನು ಪರಿಶೀಲಿಸಿದ ನಂತರ ಬೆಳೆ ಪರಿಹಾರ ತಂತ್ರಾಂಶದಲ್ಲಿ ನಮೂದು ಮಾಡಬೇಕು ಎಂದು ಅವರು ಸೂಚಿಸಿದರು.
ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಬರುವ 14ನೇ ವಾರ್ಡ್ ಇಂದಿರಾ ನಗರದ ತಗ್ಗು ಪ್ರದೇಶದಲ್ಲಿ ನಿಲ್ಲುವ ಮಳೆ ನೀರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅಲ್ಲಿಯ ನಿವಾಸಿಗಳಿಗೆ ನೋಟೀಸ್ ನೀಡಿ ಸಭೆ ಕೈಗೊಳ್ಳಬೇಕು ಜೊತೆಗೆ ನಗರಸಭೆ ವ್ಯಾಪ್ತಿಯಲ್ಲಿ ಬರುವ ಚರಂಡಿ ವ್ಯವಸ್ಥೆ ದುರಸ್ತಿ ಕೈಗೊಂಡು ಸ್ವಚ್ಛಗೊಳಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.