ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಂದ ಗ್ರಾಮಗಳಿಗೆ ಭೇಟಿ-ಪರಿಶೀಲನೆ

ವಿಜಯಪುರ:ಜು.26: ಜಿಲ್ಲೆಯ ಪ್ರವಾಹಕ್ಕೆ ಬಾಧಿತವಾಗುವ ಮುದ್ದೇಬಿಹಾಳ ಹಾಗೂ ನಿಡಗುಂದಿ ತಾಲೂಕಿನ ಮಸೂತಿ, ಮುದೂರ, ಗಂಗೂರ ಗ್ರಾಮಗಳಿಗೆ ಮಂಗಳವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ, ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಿಡಗುಂದಿ ತಾಲೂಕಿನ ಮಸೂತಿ ಗ್ರಾಮಕ್ಕೆ ಭೇಟಿ ನೀಡಿದ ಅವರು ಗ್ರಾಮದ ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿ, ಅರಳದಿನ್ನಿ ಸೇತುವೆ ಮೇಲೆ ಕೃಷ್ಣಾ ನದಿಗೆ ಹರಿದು ಬರುತ್ತಿರುವ ನೀರಿನ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು, ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಗ್ರಾಮದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರಿಕೆ ವಹಿಸಬೇಕು. ಆಲಮಟ್ಟಿ ಕೃಷ್ಣಾ ದಡದ ನದಿ ಪಾತ್ರ ಹಳ್ಳಿಗಳಲ್ಲಿ ಈ ಕುರಿತು ಸಾರ್ವಜನಿಕರಿಗೆ ಸಲಹೆ ಸೂಚನೆಗಳನ್ನು ನೀಡಿ ಜಾಗೃತಗೊಳಿಸಬೇಕು ಎಂದು ಹೇಳಿದರು.
ಮುದ್ದೇಬಿಹಾಳ ತಾಲೂಕಿನ ಮುದೂರರ ಗ್ರಾಮಕ್ಕೆ ಭೇಟಿ ನೀಡಿ ಪ್ರವಾಹಕ್ಕೆ ಬಾಧಿತವಾಗುವ ಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು. ಯಾವುದೇ ಹಾನಿಯಾಗದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಗ್ರಾಮ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಎಲ್ಲ ಕ್ರಮಗಳನ್ನು ಕೈಗೊಂಡು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆಯಲ್ಲಿರುವಂತೆ ಅವರು ಸೂಚನೆ ನೀಡಿದರು.
ಯಾವುದೇ ಅವಘಡ ಸಂಭವಿಸಿದ್ದಲ್ಲಿ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನಿಡಿ ಪರಿಶೀಲನೆ ನಡೆಸಿ, ಜಿಲ್ಲಾಡಳಿತಕ್ಕೆ ಮಾಹಿತಿ ಒದಗಿಸಬೇಕು. ವಿಪತ್ತು ನಿರ್ವಹಣಾ ನಿಯಮನುಸಾರ ಪರಿಹಾರವನ್ನು ತುರ್ತಾಗಿ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ನಿಡಗುಂದಿ ತಹಶೀಲ್ದಾರ ಕಿರಣಕುಮಾರ ಕುಲಕರ್ಣಿ, ನಿಡಗುಂದಿ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿ.ಎಸ್.ಹಿರೇಮಠ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.