ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಲೇರಿಯಾ ನಿಯಂತ್ರಣ ಸಭೆರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು : ಸಿಇಒ ಸೂಚನೆ


ಸಂಜೆವಾಣಿ ವಾರ್ತೆ
ವಿಜಯನಗರ: ಮೇ.26: ಜಿಲ್ಲೆಯಲ್ಲಿ ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂಗ್ಯೂ ನಿಯಂತ್ರಣಕ್ಕಾಗಿ ವಿವಿಧ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ. ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕುರಿತು ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿ ರೋಗ ನಿಯಂತ್ರಣಕ್ಕೆ ಅಗತ್ಯವುಳ್ಳ ಸಕಲ ಮಾರ್ಗಸೂಚಿಗಳನ್ನು ಕಾರ್ಯಗತಗೊಳಿಸಲು ಇಲಾಖಾವಾರು ಅಗತ್ಯ ಕ್ರಮ ಕೈಗೊಳ್ಳಬೇಕು. ಶಿಕ್ಷಣ ಇಲಾಖೆಯ ವತಿಯಿಂದ ಶಾಲಾ ಮಕ್ಕಳಿಗೂ ಸಹ ರೋಗ ಹರಡುವಿಕೆ ಮತ್ತು ರೋಗ ನಿಯಂತ್ರಣ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. ರೋಗ ಹರಡುವಿಕೆ ಸಂಭವವಿರುವ ಕಾರ್ಯ ಸ್ಥಳಗಳಲ್ಲಿ ಇಲಾಖೆಯ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಗ್ರಾಮೀಣಾಭಿವೃದ್ಧಿ, ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು, ನಗರಾಭಿವೃದ್ಧಿ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಆಯುಷ ಇಲಾಖೆ, ಮೀನುಗಾರಿಕೆ ಮತ್ತು ಪಶು ಸಂಗೋಪನೆ, ಸಾರಿಗೆ ಇಲಾಖೆ ವತಿಯಿಂದ ಸಹ ಅಗತ್ಯ ಕ್ರಮ ಕೈಗೊಂಡು ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು ಎಂದು ತಿಳಿಸಿದರು.
ನಗರಸಭೆ ವತಿಯಿಂದ ನಗರದಲ್ಲಿರುವ ರಾಜಕಾಲುವೆ ಹಾಗೂ ಚರಂಡಿ ಸ್ವಚ್ಚಗೊಳಿಸುವ ಕಾರ್ಯ ವೇಗವಾಗಿ ಪೂರೈಸಬೇಕು. ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವ ಇರುವ ಕಾರಣ ಶೀಘ್ರವಾಗಿ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು. ಜೊತೆಗೆ ಕಾಲುವೆಗಳಿಗೆ ಪ್ಲಾಸ್ಟಿಕ್ ಚೀಲ ಹಾಗೂ ಇತರ ವಸ್ತುಗಳನ್ನು ಬೀಸಾಡದಂತೆ ಎಚ್ಚರಿಕೆ ನೀಡಬೇಕು ಎಂದು ತಿಳಿಸಿದರು
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಲೀಂ ಮಾತನಾಡಿ ಸೊಳ್ಳೆಗಳಿಂದ ಮಲೇರಿಯಾ, ಡೆಂಗ್ಯೂ, ಮೆದುಳು ಜ್ವರ ಹಾಗೂ ಆನೆಕಾಲು ರೋಗ ಹರಡುವ ಸಾಧ್ಯತೆ ಹೆಚ್ಚಿದ್ದು, ವಿವಿಧ ಇಲಾಖೆಗಳಲ್ಲಿ ಅಗತ್ಯ ಕ್ರಮ ಮತ್ತು ಸಹಕಾರ ನೀಡಬೇಕು. ಆರೋಗ್ಯ ಇಲಾಖೆಯಿಂದ ಪ್ರತಿ 15 ದಿನಗಳಿಗೊಮ್ಮೆ ಲಾರ್ವಾ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ.  ನಿಯಂತ್ರಣ ಕಾರ್ಯ ತೀವ್ರಗೊಳಿಸಿದಾಗ ರೋಗ ತಡೆಗಟ್ಟಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ.ಕಮಲಮ್ಮ, ಎಂ.ಪಿ.ದೊಡ್ಡಮನಿ, ಡಾ.ಬಸವರಾಜ್, ಜಿ.ಕೊಟ್ರೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.