
ಬಳ್ಳಾರಿ,ಆ.06: ಬಳ್ಳಾರಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಅಲ್ಲಿಪುರದ ಮಹಾದೇವ ತಾತ ಮಠ ಹತ್ತಿರದ ತುಂಗಭದ್ರಾ ಡ್ಯಾಂ ಮೂಲ ಮೇಲ್ಮಟ್ಟ ಹಾಗೂ ಕೆಳಮಟ್ಟದ ಕಾಲುವೆಗಳಿಗೆ (ಊಐಅ / ಐಐಅ) ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಶನಿವಾರ ಬಾಗಿನ ಅರ್ಪಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲೆನಾಡು ಪ್ರದೇಶ ಪಾತ್ರದಲ್ಲಿ ಉತ್ತಮವಾಗಿ ಮಳೆಯಾಗಿದೆ. ಈ ಭಾಗದ ಜೀವನಾಡಿಯಾದ ತುಂಗಭದ್ರಾ ಜಲಾಶಯಕ್ಕೆ 84 ಟಿಎಂಸಿ ನೀರು ಹರಿದುಬಂದಿದ್ದು, ಶೇ.70 ರಷ್ಟು ಭರ್ತಿಯಾಗಿದೆ.
ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚಿಸಿ ಕಾಲುವೆಗಳಿಗೆ ನೀರು ಹರಿಸಲಾಗಿದೆ ಎಂದರು.
ಮುಂದಿನ ದಿನಗಳಲ್ಲಿ ನಮ್ಮ ಭಾಗದಲ್ಲಿ ಹೆಚ್ಚಿನ ಮಳೆ, ಬೆಳೆ ಆಗುವುದರ ಮೂಲಕ ರೈತರು ಸಮೃದ್ಧಿ ಹೊಂದಬೇಕು ಎನ್ನುವ ನಿಟ್ಟಿನಲ್ಲಿ ಗಂಗೆಗೆ ಬಾಗಿನ ಅರ್ಪಿಸಿಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಡೂರು ಶಾಸಕ ಈ.ತುಕಾರಾಂ, ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಮಾಜಿ ಮೇಯರ್ ಎಂ.ರಾಜೇಶ್ವರಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ, ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್ ಸೇರಿದಂತೆ ಇತರರು ಇದ್ದರು.