ಜಿಲ್ಲಾ ಕಸಾಪಗೆ ಆಡಳಿತಾಧಿಕಾರಿ ನೇಮಕ: ಬಿ.ಧನಂಜಯ ಅಧಿಕಾರ ಸ್ವೀಕಾರ

ಚಿತ್ರದುರ್ಗ,ಸೆ.4; ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ  ಪ್ರಸ್ತುತ ಕಾರ್ಯಕಾರಿ ಸಮಿತಿಯ ಅಧಿಕಾರದ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಧನಂಜಯ ಆಡಳಿತಾಧಿಕಾರಿಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
 ನಗರದ ತರಾಸು ಮಂದಿರದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ.ದೊಡ್ಡಮಲ್ಲಯ್ಯ ಅವರು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಧನಂಜಯ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
  ಹಾಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಅಧಿಕಾರವಧಿಯು ಸೆಪ್ಟೆಂಬರ್ 2ಕ್ಕೆ ಅಂತ್ಯವಾದ ಹಿನ್ನಲೆಯಲ್ಲಿ ಸೆಪ್ಟೆಂಬರ್ 3 ರಿಂದ ಅನ್ವಯವಾಗುವಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಡಳಿತಾಧಿಕಾರಿ ಕಾರ್ಯನಿರ್ವಹಿಸಲಿದ್ದಾರೆ.
 ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯು ಮೇ 9 ರಂದು ಈ ಹಿಂದೆ ನಿಗಧಿಯಾಗಿತ್ತು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಹಿಂತೆಗೆದುಕೊಂಡ ನಂತರ ಅಂತಿಮವಾಗಿ 9 ಮಂದಿ ಸ್ಪರ್ಧೆಯಲ್ಲಿದ್ದರು. ಕೋವಿಡ್ ಏರುಗತಿಯ ಹಿನ್ನಲೆಯಲ್ಲಿ ಚುನಾವಣೆಯನ್ನು ಸರ್ಕಾರ ಮುಂದೂಡಿತ್ತು.
ಆಡಳಿತಾಧಿಕಾರಿ ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ದೊಡ್ಡಮಲ್ಲಯ್ಯ, ಎಂ.ಗೋವಿಂದಪ್ಪ, ಕೆ.ಎಂ.ಯೂಸಫ್, ಆರ್.ರಮೇಶ್, ಎಸ್.ಹನುಮಂತಪ್ಪ, ಮೋಕ್ಷಾರುದ್ರಸ್ವಾಮಿ ಇದ್ದರು.