ಜಿಲ್ಲಾ ಕಾಂಗ್ರೆಸ್‌ಗೆ ನೂತನ ಸಾರಥಿ ಚಂದ್ರಶೇಖರಗೌಡ

ತುಮಕೂರು, ನ. ೨೫- ವಿಧಾನಸಭಾ ಚುನಾವಣೆಗೆ ಇನ್ನು ಐದಾರು ತಿಂಗಳು ಬಾಕಿ ಇರುವಾಗಲೇ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಮುಖಂಡ ಚಂದ್ರಶೇಖರ್ ಗೌಡ ರವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಈವರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದ ಆರ್. ರಾಮಕೃಷ್ಣಪ್ಪ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಚಂದ್ರಶೇಖರ್‌ಗೌಡ ನೇಮಕಗೊಂಡಿದ್ದಾರೆ.
ತುಮಕೂರು ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ ಹಲವು ದಿನಗಳಿಂದ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಆಗಲಿದೆ ಎನ್ನುವ ಮಾತುಗಳು ಹಲವು ದಿನಗಳಿಂದ ಕೇಳಿ ಬರುತ್ತಿದ್ದವು. ಅದಕ್ಕೆ ಪುಷ್ಠಿ ನೀಡುವಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಅಧಿಕೃತವಾಗಿ ಚಂದ್ರಶೇಖರ್ ಗೌಡ ರವರನ್ನು ನೇಮಕ ಮಾಡಿದ್ದಾರೆ.
ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಚಂದ್ರಶೇಖರ್‌ಗೌಡ ರವರು ಸಹ ಕೊರಟಗೆರೆ ಕ್ಷೇತ್ರದ ಮುಖಂಡರಾಗಿದ್ದು, ಹಲವು ದಿನಗಳಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತೆರೆಮರೆಯ ಕಸರತ್ತು ನಡೆಸಿದ್ದರು.
ಮಾಜಿ ಉಪಮುಖ್ಯಮಂತ್ರಿ ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ. ಜಿ. ಪರಮೇಶ್ವರ್ ರವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಚಂದ್ರಶೇಖರ್ ಗೌಡ ರವರಿಗೆ ನಿರೀಕ್ಷೆಯಂತೆ ಜಿಲ್ಲಾಧ್ಯಕ್ಷ ಸ್ಥಾನ ಲಭ್ಯವಾಗಿರುವುದು ಹಲವು ಸ್ಥಳೀಯ ಕಾಂಗ್ರೆಸ್ ಮುಖಂಡರಲ್ಲಿ ಹರ್ಷ ತಂದಿದೆ.
ಚಂದ್ರಶೇಖರಗೌಡ ಹೇಳಿಕೆ
ನನ್ನನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನನಾಗಿ ಆಯ್ಕೆ ಮಾಡಿರುವುದಕ್ಕೆ ಪಕ್ಷದ ಎಲ್ಲ ಹಿರಿಯ ಮುಖಂಡರು ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರುಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ನನ್ನಂತಹ ಕಾರ್ಯಕರ್ತನಿಗೆ ಜವಾಬ್ದಾರಿ ನೀಡಿದ್ದು, ಪಕ್ಷದ ಸಂಘಟನೆಗೆ ಪ್ರಾಮಾಣಿಕವಾಗಿ ಶಕ್ತಿ ಮೀರಿ ಶ್ರಮಿಸುತ್ತೇನೆ ಎಂದು ಅವರು ಹೇಳಿದರು.
ಜಿಲ್ಲೆಯ ೧೧ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಶ್ರಮಿಸುವ ಜತೆಗೆ ಎಲ್ಲರನ್ನು ಒಟ್ಟುಗೂಡಿಸಿ ಸಂಘಟನಾತ್ಮಕವಾಗಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮ ವಹಿಸಿ ಕೆಲಸ ಮಾಡುತ್ತೇನೆ ಎಂದರು.
ಹೋಬಳಿ, ಗ್ರಾಮ ಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಕೆಲಸ ಮಾಡುವ ಮೂಲಕ ಪಕ್ಷದ ನಾಯಕರು ನನ್ನ ಮೇಲೆ ನಂಬಿಕೆ, ವಿಶ್ವಾಸ ಇಟ್ಟು ನೀಡಿರುವ ದೊಡ್ಡ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವುದಾಗಿ ಹೇಳಿದರು.