ಜಿಲ್ಲಾ ಕೌಶಲ್ಯ ಮಿಷನ್‍ನ ವಿವಿಧ ಯೋಜನೆ ಕಾರ್ಯಕ್ರಮಗಳನ್ನು ಹೆಚ್ಚಿನ ಜನರಿಗೆ ತಲುಪಿಸಿಃ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್

ವಿಜಯಪುರ, ಡಿ.4-ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಹಾಗೂ ಜಿಲ್ಲಾ ಕೌಶಲ್ಯ ಮಿಷನ್‍ನ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಇನ್ನೂ ಹೆಚ್ಚಿನ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಕೌಶಲ್ಯ ಮಿಷನ್‍ನ ಅಧ್ಯಕ್ಷರೂ ಹಾಗೂ ಜಿಲ್ಲಾಧಿಕಾರಿಗಳಾದ ಪಿ.ಸುನೀಲಕುಮಾರ್ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಕೌಶಲ್ಯ ಮಿಷನ್‍ನ ವಿವಿಧ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಜಿಲ್ಲಾ ಕೌಶಲ್ಯ ಮಿಷನ್‍ನಲ್ಲಿ ಮೀಸಲಿಟ್ಟ ಅನುದಾನವನ್ನು ಸದ್ವಿನಿಯೋಗ ಮಾಡಿಕೊಂಡು, ಆ ಮೂಲಕ ಹೆಚ್ಚಿನ ಜನರಿಗೆ ಅನುಕೂಲವಾಗುವಂತೆ ಮಾಡಬೇಕು ಎಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅದರಂತೆ ಜಿಲ್ಲಾ ಕೌಶಲ್ಯ ಮಿಷನ್‍ನ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯವಿರುವ ಜಮೀನು ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕೌಶಲ್ಯ ಮಿಷನ್‍ನ ಇಲ್ಲಿಯವರೆಗಿನ ಕಾರ್ಯಗಳು ತೃಪ್ತಿದಾಯಕವಾಗಿದ್ದು, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತಾಗಿರುವುದು ಶ್ಲಾಘನೀಯ ಎಂದು ಅವರು ಹೇಳಿದರು.
ಅದೇ ರೀತಿ ಜನರಲ್ಲಿ ಇನ್ನಷ್ಟು ಜಾಗೃತಿಯನ್ನುಂಟು ಮಾಡಲು ಪ್ರಯತ್ನಿಸಬೇಕು. ಅದಕ್ಕಾಗಿ ಎನ್‍ಜಿಒ ಗಳ ಸಹಕಾರದೊಂದಿಗೆ ರಸಪ್ರಶ್ನೆ ಕಾರ್ಯಕ್ರಮಗಳಂತಹ ಜಾಗೃತಿ, ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆ ಮೂಲಕ ಜನರಲ್ಲಿ ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ವಿಶೇಷ ಜಾಗೃತಿ ಹಾಗೂ ಅರಿವು ಮೂಡಿಸಬೇಕು ಎಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಇದಕ್ಕಾಗಿ ಮುಂಬರುವ ದಿನಗಳಲ್ಲಿ ವಿಶೇಷವಾಗಿ ಗ್ರಾಮೀಣ ಭಾಗದ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆ ಮೂಲಕ ವಿದ್ಯಾರ್ಥಿಗಳು, ಯುವಜನರು ಇದರಲ್ಲಿ ಇನ್ನೂ ಹೆಚ್ಚಿನ ಉತ್ಸುಕತೆಯಿಂದ ಪಾಲ್ಗೊಳ್ಳುವಂತಾಗಬೇಕು ಎಂದು ಅವರು ತಿಳಿಸಿದರು.
ಜಿಲ್ಲೆಯ ಕೇಂದ್ರ ಕಾರಾಗೃಹದಲ್ಲಿ ಬಂಧಿಗಳಿಗೆ ಕೈಗೊಳ್ಳಲಾಗುವ ತರಬೇತಿ ಕಾರ್ಯಕ್ರಮಗಳನ್ನು ಉತ್ತಮವಾಗಿ ಕೈಗೊಳ್ಳಬೇಕು ಎಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಟಾಟಾ ಟೆಕ್ನಾಲಜಿ ಮೂಲಕ ಜಿಲ್ಲೆಯ 6 ಐಟಿಐ ಕಾಲೇಜುಗಳಲ್ಲಿ ಅತ್ಯಾಧುನಿಕ 4.0 ಕೋರ್ಸ್‍ಗಳ ಪ್ರವೇಶಾತಿ ಹೆಚ್ಚಲು, ಕೋರ್ಸ್‍ಗಳಿಗೆ ನೋಂದಣಿಯ ಪ್ರಮಾಣದಲ್ಲಿ ಕೊರತೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಇಂಡಿ ತಾಲೂಕಿನ ಬಂಥನಾಳ ಗ್ರಾಮದ ಮಹಿಳಾ ವಿದ್ಯಾಪೀಠದ ಜಮೀನಿನ ಸುರಕ್ಷತೆಯ ದೃಷ್ಟಿಯಿಂದ ಕಂಪೌಂಡ್ ಗೋಡೆ ನಿರ್ಮಿಸುವ ಬಗ್ಗೆ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ್ ಮೆಕ್ಕಳಕಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಶ್ರೀ ಭಜಂತ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಕೆ ಚವ್ಹಾಣ ಸೇರಿದಂತೆ ಜಿಲ್ಲಾ ಕೌಶಲ್ಯ ಮಿಷನ್‍ನ ವಿವಿಧ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.