ಜಿಲ್ಲಾ ಸಂಕಿರ್ಣ ವಿವಾದ ಬಗೆಹರಿಸಲು ಪ್ರಾದೇಶಿಕ ಆಯುಕ್ತರಿಗೆ ಹೈ.ಕೋ ನಿರ್ದೇಶನ

ಬೀದರ‌:ಡಿ.29: ಸಾರ್ವಜನಿಕರ ಹಿತದೃಷ್ಟಿಯಿಂದ 2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಂಕು ಸ್ಥಾಪನೆಯಾದ ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ ನಿರ್ಮಿಸುವ ಸ್ಥಳದ ವಿವಾದವನ್ನು ಬಗೆ ಹರಿಸಲು ಕ್ರಮಕೈಗೊಳ್ಳಬೇಕು ಎಂದು ಪ್ರಾದೇಶಿಕ ಆಯುಕ್ತರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಧರಿಸಿಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣದ ವಿವಾದ ಬಗೆಹರಿಸಲು ನಿರ್ದೇಶನ ನೀಡಿದೆ.

2017ರಲ್ಲಿ ಬೀದರ್‌ನಲ್ಲಿ ಶಂಕುಸ್ಥಾಪನೆ ನೆರವೇರಿಸಿದರೂ ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣದ ಕಾಮಗಾರಿ ಆರಂಭವಾಗಿಲ್ಲ. ಆದರೆ, ಇದೀಗ ಜಿಲ್ಲಾಧಿಕಾರಿಗಳ ಕಚೇರಿ ಸ್ಥಳವನ್ನು 9 ಕಿ.ಮೀ. ದೂರದಲ್ಲಿರುವ ಕೊಳಾರ (ಕೆ) ಗ್ರಾಮದ ಸಮೀಪ ನಿರ್ಮಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿಕೆ ನೀಡಿದ್ದಾರೆ.
ಇದು ಸಾರ್ವಜನಿಕರಿಗೆ ಅನುಕೂಲವಾಗಲಾರದು. ಈಗಿರುವ ಜಿಲ್ಲಾಧಿಕಾರಿ ಕಚೇರಿ ಸ್ಥಳದಲ್ಲೇ ಕಟ್ಟಡ ನಿರ್ಮಾಣ ಮಾಡಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಬೇಕು ಎಂದು ವಡ್ಡೆ ಅವರು ಮನವಿ ಮಾಡಿದ್ದರು.

2020ರ ಜುಲೈ 7ರಂದು ಪ್ರಾದೇಶಿಕ ಆಯುಕ್ತರಿಗೆ ವಿವರವಾದ ಮನವಿಪತ್ರವನ್ನು ಸಲ್ಲಿಸಲಾಗಿತ್ತು. ಈ ಮನವಿ ಪತ್ರವನ್ನು ಆಧರಿಸಿ ಪ್ರಾದೇಶಿಕ ಆಯುಕ್ತರು ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿಪತ್ರ ಆಧರಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಆದರೆ ಜಿಲ್ಲಾಧಿಕಾರಿ ಯಾವುದೇ ಕ್ರಮಕೈಗೊಂಡಿರಲಿಲ್ಲ.

ಸಾರ್ವಜನಿಕರ ಹಿತದೃಷ್ಟಿಯಿಂದ ನವೆಂಬರ್ 7ರಂದು ಬೆಂಗಳೂರಿನ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಅರ್ಜಿಯಲ್ಲಿ ಮುಖ್ಯ ಕಾರ್ಯದರ್ಶಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ, ಕಲಬುರ್ಗಿ ಪ್ರಾದೇಶಿಕ ಆಯುಕ್ತರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿತ್ತು.

ಮುಖ್ಯ ನ್ಯಾಯಮೂರ್ತಿ ಅಭಯ ಓಕಾ ಹಾಗೂ ನ್ಯಾಯಮೂರ್ತಿ ಎಸ್.ವಿಶ್ವಜೀತ ಶೆಟ್ಟಿ ಅವರ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆದಿತ್ತು.