ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊರತೆ ಇಲ್ಲ : ಮುರುಗೇಶ್ ಆರ್. ನಿರಾಣಿ

ಕಲಬುರಗಿ, ಮೇ 3: ಜಿಲ್ಲೆಯ ಕೋವಿಡ್ ಸೋಂಕಿತರಿಗೆ ಪೂರೈಕೆ ಮಾಡುವಷ್ಟು ಆಕ್ಸಿಜನ್ ಕೊರತೆ ಇಲ್ಲ, ಆದರೆ ಟ್ಯಾಂಕರ್ ಹಾಗೂ ಸಿಲಿಂಡರ್‍ಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಕೈಗಾರಿಕೆಗಳಿಂದ ಸಿಲಿಂಡರ್‍ಗಳ ಪಡೆದು ಕೊರತೆ ನೀಗಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಭರವಸೆ ನೀಡಿದರು.
ನಗರದ ಐವಾನ್-ಇ-ಶಾಹಿ ಅತಿಥಿ ಗೃಹದಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ತಲಾ 17 ಕೆಜಿಯ 800 ಸಿಲಿಂಡರ್‍ಗಳು ಅಗತ್ಯವಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಒಟ್ಟು 600 ಟನ್ ಆಕ್ಸಿಜನ್ ಅಗತ್ಯವಿದ್ದು, ಹೆಚ್ಚಿನ ಪ್ರಮಾಣದಲ್ಲಿ ಆಕ್ಸಿಜನ್ ಉತ್ಪಾದನೆಗೆ ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ಈ ನಿಟ್ಟಿನಲ್ಲಿ ನಾಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶೇಷ ಸಂಪುಟ ಸಭೆ ಕರೆದಿದ್ದು, ನಾನು ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಇಲ್ಲಿಗೆ ಬಂದಿದ್ದೇನೆ. ಕೋವಿಡ್ ನಿಯಂತ್ರಣ ಸಂಬಂಧ ಜಿಲ್ಲೆಗೆ ಏನೇನು ಬೇಕೋ ಆ ಬಗ್ಗೆ ನಾಳೆ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಅವರು ಹೇಳಿದರು.
ಕೊರೊನಾ ಕಲಬುರಗಿ ಜಿಲ್ಲೆಯಷ್ಟೆಯಲ್ಲ, ಎಲ್ಲೆಡೆ ವ್ಯಾಪಿಸಿದೆ. ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಾಮಾಣಿಕ ಪ್ರಯತ್ನ ನಡೆಸಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಬೆಡ್‍ಗಳ ಕೊರತೆ ಸರಿಪಡಿಸಲಾಗುವುದು ಎಂದ ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಕೋವಿಡ್ ವಿಷಯದಲ್ಲಿ ನಾವು ರಾಜಕಾರಣ ಮಾಡುತ್ತಿಲ್ಲ. ಕೋವಿಡ್ ನಿಯಂತ್ರಣ ಸಂಬಂಧ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಸಲಹೆ ಪಡೆಯುತ್ತಿದ್ದೇನೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುವರ್ಣಾ ಹನುಮಂತ ಮಾಲಾಜಿ, ಕರ್ನಾಟಕ ನವೀಕರಿಸಬಹುದಾದ ಇಂಧನ ನಿಯಮಿತದ ಅಧ್ಯಕ್ಷ ಚಂದು ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ್, ಶಶಿಲ್ ನಮೋಶಿ, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಮುಂತಾದವರು ಇದ್ದರು.