ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ: ಚವ್ಹಾಣ್ ಸಂತಸ

ಬೀದರ:ಅ.31: ಜಿಲ್ಲಾಡಳಿತ, ಆರೋಗ್ಯ ಇಲಾಖೆ, ವೈದ್ಯರ ಪ್ರಯತ್ನ ಹಾಗೂ ಸಾರ್ವಜನಿಕರ ಸಹಕಾರದಿಂದ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ತೀವ್ರತೆ ಕಡಿಮೆಯಾಗುತ್ತಿರುವುದು ಸಂತಸ ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ವರದಿಯಂತೆ ಅ.28ರಂದು ಜಿಲ್ಲೆಯಲ್ಲಿ 8 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 12 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 6,872 ರೋಗಿಗಳ ಪೈಕಿ 6,641 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಪ್ರಸ್ತುತ 64 ಪ್ರಕರಣಗಳು ಸಕ್ರೀಯವಾಗಿದೆ. ಹೊಸ ಪ್ರಕರಣಗಳು ಕಡಿಮೆಯಾಗುತ್ತಿರುವುದು ಉತ್ತಮ ಬೆಳವಣಿಗೆ. ಆದರೂ ಸಹ ಜನತೆ ಮೈಮರೆಯದೇ ಲಸಿಕ ಸಿದ್ಧವಾಗುವವರೆಗೆ ಎಚ್ಚರಿಕೆ ವಹಿಸಬೇಕು ಎಂದು ಪ್ರಕಟಣೆ ಮೂಲಕ ಸಾರ್ವಜನಿಕರಲ್ಲಿ ಕೋರಿದ್ದಾರೆ.

ಹಗಲು-ರಾತ್ರಿ ಎನ್ನದೇ ಕೋವಿಡ್ ರೋಗಿಗಳ ಜೀವ ಉಳಿಸಲು ಜಿಲ್ಲಾಡಳಿತ, ವೈದ್ಯರು ಹಾಗೂ ಇತರೆ ಕೋವಿಡ್ ವಾರಿಯರ್ಸ್ ಗಳ ಕಾರ್ಯ ಮೆಚ್ಚುವಂಥದ್ದು, ಈ ಸೇವೆ ಹೀಗೆಯೇ ಮುಂದುವರಿಸಿ ಜಿಲ್ಲೆಯನ್ನು ಕೋವಿಡ್ ಸೋಂಕಿನಿಂದ ಮುಕ್ತವಾಗಿಸಲು ಯತ್ನಿಸಬೇಕು ಎಂದರು.
ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂದಿರ, ಅಂಗಡಿ, ಹೋಟೆಲ್‌, ಸಂತೆ ಇಂತಹ ಜನನಿಬಿಡ ಪ್ರದೇಶಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದು ಕಂಡುಬರುತ್ತಿದೆ. ಇದು ಅತ್ಯಂತ ಅಪಾಯಕರ. ತಾವು ಸುರಕ್ಷಿತವಾಗಿರುವುದಲ್ಲದೇ ಇತರರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮನೋಭಾವ ಎಲ್ಲರಲ್ಲಿಯೂ ಬರಬೇಕು ಎಂದು ತಿಳಿಸಿದ್ದಾರೆ. ರೋಗ ನಿಯಂತ್ರಣಕ್ಕಾಗಿ ಸರ್ಕಾರ ರೂಪಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆಸ್ಪತ್ರೆ, ಬ್ಯಾಂಕ್‌, ಸರ್ಕಾರಿ ಕಚೇರಿ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ನಿರ್ವಹಿಸಬೇಕು. ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಹೋಗದಿರಿ. ಸಭೆ-ಸಮಾರಂಭಗಳಲ್ಲಿ ಭಾಗವಹಿಸುವುದನ್ನು ಸಾಧ್ಯವಾದಷ್ಟು ತಗ್ಗಿಸಬೇಕು. ಅನಿವಾರ್ಯವಿದ್ದಲ್ಲಿ ಎಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.