ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ

ವಿಜಯಪುರ: ಮೇ.31:ಮಳೆಗಾಲ ಆರಂಭವಾಗಿರುವುದರಿಂದ ಯಾವುದೇ ಸಾಂಕ್ರಾಮಿಕ ರೋಗಗಳು ಉಲ್ಬಣವಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಡೆಂಗ್ಯೂ ಮಲೇರಿಯಾ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಟ್ರೀಯ ಡೆಂಗೀ ದಿನಾಚರಣೆ ಹಾಗೂ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡೆಂಗೀ ಹಾಗೂ ಮಲೇರಿಯಾ ರೋಗಗಳ ಸ್ಥಿತಿ-ಗತಿ, ನಿವಾರಣಾ ಹಾಗೂ ಕಾರ್ಯ ತಂತ್ರದ ಬಗ್ಗೆ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.
ನಿಯಮಿತವಾಗಿ ಪಾಗಿಂಗ್ ಮಾಡುವುದು, ಚರಂಡಿ ಸ್ವಚ್ಛತೆ, ಮಳೆ ನೀರು ನಿಲ್ಲದಂತೆ ಕ್ರಮ ವಹಿಸುವುದರ ಜೊತೆಗೆ ಸಾಂಕ್ರಾಮಿಕ ರೋಗ ಹರಡುವ ಕುರಿತಾಗಿ ಜನ ಸಮುದಾಯದಲ್ಲಿ ಮಲೇರಿಯಾ, ಡೆಂಗ್ಯು ರೋಗಗಳ ಲಕ್ಷಣಗಳು ಹರಡುವಿಕೆ, ತಡೆಗಟ್ಟುವಿಕೆ ಮುಂಜಾಗೃತೆ ಹಾಗೂ ನಾಗರೀಕರ ಕರ್ತವ್ಯಗಳ ಬಗ್ಗೆ ಜಾಗೃತಿ ಅಭಿಯಾನ ಕೈಗೊಳ್ಳಬೇಕೆಂದು ಅವರು ಸೂಚಿಸಿದರು.
ಹೆಚ್ಚು ರೋಗ ಪ್ರಕರಣಗಳು ವರದಿಯಾದ ಪ್ರದೇಶದಲ್ಲಿ ಸೊಳ್ಳೆ ಪರದೆ ವಿತರಿಸಲು ಕ್ರಮವಹಿಸಬೇಕು. ನಗರದಲ್ಲಿ ತ್ಯಾಜ್ಯ ವಿಲೇವಾರಿ ಸಕಾಲದಲ್ಲಿ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕೆಂದು ಅವರು ಸೂಚಿದರು.
ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಂಡು ಜಿಲ್ಲೆಯಲ್ಲಿ ಮಲೇರಿಯಾ ಹಾಗೂ ಡೆಂಗ್ಯೂ ಪ್ರಕರಣಗಳು ಹೆಚ್ಚಾಗದಂತೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಹಾಗೂ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಜಾಗೃತೆ ವಹಿಸಲಾಗಿದೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಜೇಬುನ್ನಿಸಾಬೇಗಂ ಬೀಳಗಿ ಅವರು ಹೇಳಿದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಸಂಪತ್ ಗುಣಾರಿ ಮಾತನಾಡಿ, ಜಿಲ್ಲೆಯಲ್ಲಿ ಕುಷ್ಟರೋಗ ನಿರ್ಮೂಲನಾ ಕಾರ್ಯಕ್ರಮದಡಿ ರಾಷ್ಟ್ರೀಯ ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯಾದ್ಯಂತ ಒಟ್ಟು 1630 ತಂಡಗಳನ್ನು ರಚಿಸಲಾಗಿದೆ. ಮನೆಗಳ ಭೇಟಿ ನೀಡಿ ಸಮೀಕ್ಷೆಗೆ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಈ ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್ ಎಲ್ ಲಕ್ಕಣ್ಣವರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕವಿತಾ,ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಉಮೇಶ ಶಿರಹಟ್ಟಿಮಠ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ್ ದೈವಾಡಿ, ಜಿಲ್ಲಾ ಕುಟುಂಬ ಕಲ್ಯಾನ ಅಧಿಕಾರಿ ಡಾ. ರಾಜೇಶ್ವರಿ ಗೋಲಗೇರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ.ಕೋಲೂರ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು, ವೈದ್ಯರು ಜಿಲ್ಲಾ ಸಮನ್ವಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.