ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಜಿಲ್ಲಾಧಿಕಾರ ರವಿ ಸೂಚನೆ

ಚಾಮರಾಜನಗರ, ಮೇ. 03- ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ವ್ಯಾಪಿಸದಂತೆ ತಡೆಯುವ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ನಿಯಂತ್ರಣ ಹಾಗೂ ಕೋವಿಡ್ ಕೇರ್ ಕೇಂದ್ರಗಳ ನಿರ್ವಹಣೆ ಸಂಬಂಧ ಜಿಲ್ಲೆಯ ಹಿರಿಯ ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳ ಸಭೆ ನಡೆಸಿ ಅವರು ಅಗತ್ಯ ನಿರ್ದೇಶನಗಳನ್ನು ನೀಡಿದರು.
ಹೆಚ್ಚಾಗುತ್ತಿರುವ ಕೋವಿಡ್ ಸೋಂಕು ಪ್ರಕರಣಗಳನ್ನು ನಿಯಂತ್ರಿಸುವ ಸಂಬಂಧ ಇನ್ನಷ್ಟು ಪರಿಣಾಮಕಾರಿ ಕ್ರಮಗಳಿಗೆ ಮುಂದಾಗಬೇಕು. ವೈದ್ಯರ ನಿಯೋಜನೆ, ಆರೋಗ್ಯ ಸಿಬ್ಬಂದಿಗಳ ನೇಮಕವನ್ನು ಅತ್ಯಂತ ಸುವ್ಯಸ್ಥಿತವಾಗಿ ಕೈಗೊಳ್ಳ ಬೇಕು. ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೀವ್ರಗೊ ಳಿಸಬೇಕೆಂದು ತಿಳಿಸಿದರು.
ಜಿಲ್ಲೆಗೆ ಪೂರೈಕೆಯಾಗುತ್ತಿರುವ ಅಮ್ಲಜನಕವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸೋಕಿತರಿಗೆ ಅಗತ್ಯ ಪ್ರಮಾಣದಲ್ಲಿ ಬೇಕಿರುವ ಔಷಧೋಪಚಾರಗಳಲ್ಲಿ ಯಾವುದೇ ದೂರುಗಳು ಬರಬಾರದು. ಕೋವಿಡ್ ಆಸ್ಪತ್ರೆಯಲ್ಲಿರುವ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಬಳಸಿಕೊಂಡು ಸೋಂಕಿತರಿಗೆ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಆರ್. ರವಿ, ವೈದ್ಯಕೀಯ ಕಾಲೇಜಿನ ನಿರ್ದೇಶಕರು ಹಾಗೂ ಡೀನ್ ಡಾ. ಸಂಜೀವ್, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಮುರುಗೇಶ್, ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ. ನಾಗರಾಜು, ಜಿಲ್ಲಾ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ಕೃಷ್ಣಪ್ರಸಾದ್, ತಜ್ಞರಾದ ಡಾ. ರಮೇಶ್, ಡಾ. ಮಹೇಶ್, ಇತರೆ ವೈದ್ಯಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.