ಜಿಲ್ಲೆಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭ

ಮೈಸೂರು,ಮಾ.31:- ರಾಜ್ಯಾದ್ಯಂತ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಿವೆ. ಮೈಸೂರು ಜಿಲ್ಲೆಯಾದ್ಯಂತ 1,297 ಪುನರಾವರ್ತಿತ ಸೇರಿ ಒಟ್ಟು 37,475 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು ಮೈಸೂರು ನಗರದ 54 ಸೇರಿ ಜಿಲ್ಲೆಯಾದ್ಯಂತ ಒಟ್ಟು 148 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
ಹೊಸಬರಿಗಾಗಿ 143 ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳಿಗಾಗಿ 5 ಪರೀಕ್ಷಾ ಕೇಂದ್ರಗಳನ್ನು ಬಳಸಲಾಗುವುದು. ಈಗಾಗಲೇ ಆನ್ ಲೈನ್ ನಲ್ಲಿ ಪ್ರವೇಶ ಪತ್ರಗಳನ್ನು ಮುಖ್ಯೋಪಾಧ್ಯಾಯರು ಡೌನ್ ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು ಜಿಲ್ಲಾ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ತಿಳಿಸಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರ ತೋರಿಸಿ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಇಂದು ಬೆಳಿಗ್ಗೆ 10.30ರಿಂದ ಪರೀಕ್ಷೆ ಆರಂಭವಾಗಿದ್ದು ಮಧ್ಯಾಹ್ನ 1.45ರವರೆಗೆ ನಡೆಯಲಿದೆ. ಇಂದು ಪ್ರಥಮ ಭಾಷೆಯ ಪರೀಕ್ಷೆ ನಡೆಯಲಿದೆ. ಪರೀಕ್ಷೆಯು ಏ.15ರಂದು ಮುಕ್ತಾಯಗೊಳ್ಳಲಿದೆ.
ಭದ್ರತಾ ದೃಷ್ಟಿಯಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೆÇಲೀಸ್ ಬಂದೋಬಸ್ತ್ ಮಾಡಲಾಗಿದ್ದು ಸಿಸಿ ಕ್ಯಾಮರಾ ಕಣ್ಗಾವಲಿದೆ. ಪರೀಕ್ಷಾ ಕೇಂದ್ರದ ಸುತ್ತಲಿನ ಝೆರಾಕ್ಸ್ ಕೇಂದ್ರಗಳನ್ನು ಪರೀಕ್ಷೆಯ ಅವಧಿಯಲ್ಲಿ ಬಂದ್ ಮಾಡಲಾಗಿದೆ.
ವಿದ್ಯಾರ್ಥಿಗಳು ಮೊಬೈಲ್ ಫೆÇೀನ್, ಸ್ಮಾರ್ಟ್ ವಾಚ್, ಇಯರ್ ಫೆÇೀನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಪರೀಕ್ಷಾ ಕೇಂದ್ರಗಳಿಗೆ ತರದಂತೆ ನಿಷೇಧ ಹೇರಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ತಮ್ಮ ಕೊಠಡಿಗಳ ಸಂಖ್ಯೆಯನ್ನು ಖಚಿತಪಡಿಸಿಕೊಳ್ಳುತ್ತಿರುವುದು ಕಂಡು ಬಂತು. ಇನ್ನೂ ಕೆಲವರು ಓದಿದನ್ನು ಮನನ ಮಾಡಿಕೊಳ್ಳುತ್ತಿದ್ದರೆ, ಮತ್ತೆ ಕೆಲವರು ನೋಟ್ ಬುಕ್ ನಲ್ಲಿ ಮಹತ್ವದ ಅಂಶಗಳ ಮೇಲೆ ಕಣ್ಣಾಡಿಸುತ್ತಿರುವುದು ಕಂಡು ಬಂತು.